ಬೆಂಗಳೂರು: ಡಾ. ಕೆ.ಸುಧಾಕರ್ ಹೇಳಿಕೆ ಖಂಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಸ್ಥಾನದಿಂದ ಅವರನ್ನು ವಜಾ ಮಾಡುವಂತೆ ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ನೇತೃತ್ವದಲ್ಲಿ 15ಕ್ಕೂ ಹೆಚ್ಚು ಕಾರ್ಯಕರ್ತೆಯರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು. ಸ್ಥಳದಲ್ಲಿದ್ದ ಪೊಲೀಸರು ಇವರನ್ನು ತಡೆದು ಬಂಧಿಸಿ ಬೇರೆಡೆ ಕರೆದೊಯ್ದರು.
ಕಾಂಗ್ರೆಸ್ ಶಾಸಕಿಯರ ಜೊತೆ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಸಚಿವ ಸ್ಥಾನದಿಂದ ಸುಧಾಕರ್ ಅವರನ್ನು ಕೂಡಲೇ ವಜಾಗೊಳಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಒತ್ತಾಯಿಸಿದರು. ಅಲ್ಲದೇ, ಇವರ ಶಾಸಕ ಸ್ಥಾನವನ್ನು ಅನರ್ಹಗೊಳಿಸುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೂ ಮನವಿ ಮಾಡಿದರು. ಸುಧಾಕರ್ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿಯೂ ಈ ಸಂದರ್ಭ ಅವರು ತಿಳಿಸಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಈ ರೀತಿಯ ನಿರ್ಧಾರ ಕೈಗೊಂಡು ಸಿಎಂ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಮುತ್ತಿಗೆ ಹಾಕುವುದನ್ನು ತಡೆಯುವಲ್ಲಿ ಯಶಸ್ವಿಯಾದರು.
ಓದಿ: 12 ಲಕ್ಷ ಡೋಸ್ ಲಸಿಕೆ ಕೇಂದ್ರದಿಂದ ರಾಜ್ಯಕ್ಕೆ ಶೀಘ್ರ ರವಾನೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ತಮ್ಮನ್ನ ಬಂಧಿಸಿದ ಪೊಲೀಸರು ಹಾಗೂ ಸರ್ಕಾರದ ನಿಲುವನ್ನು ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದರೂ, ಬಲವಂತವಾಗಿ ಎಲ್ಲರನ್ನೂ ಸ್ಥಳದಿಂದ ಕರೆದೊಯ್ಯಲಾಯಿತು.