ಬೆಂಗಳೂರು: ಕಾವಲ್ ಭೈರಸಂದ್ರ ಗಲಭೆ ನಿಯಂತ್ರಿಸುವಲ್ಲಿ ರಾಜ್ಯ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ನೈತಿಕ ಹೊಣೆ ಹೊತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಮನೋಹರ ಹಾಗೂ ಸಲೀಂ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗೃಹ ಸಚಿವರ ರಾಜೀನಾಮೆಗೆ ಆಗ್ರಹ ಮಾಡಲಾಗಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಶಾಸಕರಿಗೆ ರಕ್ಷಣೆ ನೀಡುವಂತಹ ಪರಿಸ್ಥಿತಿ ಉದ್ಭವಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾದ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಲೇಬೇಕು. ಗಲಾಟೆ ನಡೆಯುವ ಮುನ್ಸೂಚನೆ ಇದ್ದರೂ ನಿಯಂತ್ರಿಸುವ ಪ್ರಯತ್ನ ಮಾಡುವಲ್ಲಿ ಗೃಹ ಇಲಾಖೆ ವಿಫಲವಾಗಿದೆ. ರಾಜ್ಯದ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರ ಈ ಗಲಭೆಗೆ ಪರೋಕ್ಷವಾಗಿ ಕಾರಣವಾಗಿದೆ ಎಂದು ಆರೋಪಿಸಿದರು.
ಭ್ರಷ್ಟಾಚಾರದಲ್ಲಿ ತೊಡಗಿರುವುದು ಸರ್ಕಾರದ ಸಾಧನೆ. ಧರ್ಮದ ಹೆಸರಿನಲ್ಲಿ ಕೀಳುಮಟ್ಟದ ರಾಜಕೀಯ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.
ಈ ವೇಳೆ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸದ ಮೇಲೆ ದಾಳಿಯಾಗಿದೆ. ರಾಜ್ಯದಲ್ಲಿ ಗೃಹ ಸಚಿವರು ಇದ್ದಾರಾ ಇಲ್ವಾ ಅನ್ನುವುದು ಗೊತ್ತಿಲ್ಲ. ಬೇಹುಗಾರಿಕಾ ವ್ಯವಸ್ಥೆ ಇದ್ದು ಯಾಕೆ ಈ ಘಟನೆ ನಡೆಯುವ ಬಗ್ಗೆ ಮುಂಚಿತವಾಗಿ ತಿಳಿಯಲಿಲ್ಲ. ಇಡೀ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ನವೀನ್ ಒಬ್ಬ ಬಿಜೆಪಿ ಕಾರ್ಯಕರ್ತ. ಅವನ ಮೇಲೆ ಕ್ರಮ ಕೈಗೊಳ್ಳಬೇಕು. ಆದರೆ ಶಾಸಕರ ಮನೆ ಮೇಲೆ ಪುಂಡರ ದಾಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.