ಬೆಂಗಳೂರು : ಆಗ್ನೇಯ ವಲಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಮೇಶ್ ಬಾಬು ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ರಮೇಶ್ ಬಾಬು ಅವರು ಶಾಂತಿನಗರದಲ್ಲಿ ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿ ನವೀನ್‌ಕುಮಾರ್ ಸಿಂಗ್ ಅವರಿಗೆ ಇಂದು ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಡಿಸಿಎಂ ಜಿ ಪರಮೇಶ್ವರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಇತ್ತೀಚೆಗೆ ಜೆಡಿಎಸ್ ತೊರೆದು ರಮೇಶ್ ಬಾಬು ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಕೈಹಿಡಿದಿದ್ದರು.
ಹೈಕಮಾಂಡ್ ನಿರ್ಧಾರದ ಮೇಲೆ ಆಗ್ನೇಯ ವಲಯ ಪದವೀಧರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ರಮೇಶ್ ಬಾಬು ಹೆಸರನ್ನು ಘೋಷಿಸಿ ಇಂದು ಬೆಳಗ್ಗೆ ಡಿಕೆಶಿ ಬಿ ಫಾರಂ ವಿತರಿಸಿದರು. ಸದಾಶಿವನಗರದ ಡಿ ಕೆ ಶಿವಕುಮಾರ್ ನಿವಾಸದಲ್ಲಿ ಬಿ-ಫಾರಂ ಸ್ವೀಕರಿಸಿದ ರಮೇಶ್ ಬಾಬು ಅವರೊಂದಿಗೆ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.