ಬೆಂಗಳೂರು: ರಾಜ್ಯ ಸರ್ಕಾರದ ಬಜೆಟ್ ಮೇಲಿನ ಚರ್ಚೆಯಲ್ಲಿ ಯಾವ ರೀತಿ ಪಾಲ್ಗೊಳ್ಳಬೇಕು ಎಂಬ ಕುರಿತು ಚರ್ಚಿಸಲು ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಸಂಜೆ 6.30ಕ್ಕೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್ಆರ್ ಪಾಟೀಲ್, ಪಕ್ಷದ ಕಾರ್ಯಾಧ್ಯಕ್ಷರಾದ ರಾಮಲಿಂಗ ರೆಡ್ಡಿ, ಧ್ರುವನಾರಾಯಣ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹ್ಮದ್ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ವಿಧಾನ ಮಂಡಲದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ವಿಚಾರವಾಗಿ ಮುಂದಾಗಿರುವುದನ್ನ ವಿರೋಧಿಸಿ, ಬಜೆಟ್ ಅಧಿವೇಶನ ಆರಂಭದ ಎರಡು ದಿನ ಚರ್ಚೆಗೆ ಮೀಸಲಿಟ್ಟಿದ್ದ ಅವಧಿಯಲ್ಲಿ ಪಾಲ್ಗೊಳ್ಳದೇ ತನ್ನ ವಿರೋಧ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲಿ ನಿರಂತರ ವಿರೋಧ ವ್ಯಕ್ತವಾದರೆ, ವಿಧಾನ ಪರಿಷತ್ನಲ್ಲಿ ಎರಡನೇ ದಿನಕ್ಕೆ ಈ ವಿಷಯವನ್ನೇ ಕೈಬಿಟ್ಟು ಬೇರೆ ಚರ್ಚೆಯನ್ನು ನಡೆಸಲಾಗಿದೆ. ಇದರ ಜೊತೆ ಜೊತೆಗೆ ಮುಂಬರುವ ದಿನಗಳಲ್ಲಿ ಬಜೆಟ್ ಮೇಲೆ ಯಾವ ರೀತಿ ಚರ್ಚೆ ನಡೆಸಬೇಕು. ಬಜೆಟ್ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ಮಾಡಿರುವ ಲೋಪಗಳನ್ನ ಎತ್ತಿ ತೋರಿಸುವ ಹಾಗೂ ವೈಫಲ್ಯಗಳನ್ನು ತಿಳಿಸುವ ನಿಟ್ಟಿನಲ್ಲಿ ಇಂದಿನ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ.
ಓದಿ : ಸಿಎಂ ಮಂಡಿಸಲಿರುವ ಬಜೆಟ್ನಲ್ಲಿ ಹೊಸ ಯೋಜನೆಗಳ ಘೋಷಣೆ ಸಾಧ್ಯತೆ
ಇದರ ಹೊರತಾಗಿ ಕಾಂಗ್ರೆಸ್ ಪಕ್ಷದಲ್ಲಿಯೇ ಕೇಳಿ ಬರುತ್ತಿರುವ ಅಪಸ್ವರಗಳಿಗೆ ಒಂದು ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಾಮರಸ್ಯ ಕೊರತೆ ಇದೆ ಎಂಬ ಮಾತಿಗೂ ಇಂದಿನ ಸಭೆಯಲ್ಲಿ ಸ್ಪಷ್ಟೀಕರಣ ನೀಡುವ ಸಾಧ್ಯತೆ ಇದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ದೊಡ್ಡ ಸುದ್ದಿಯಾಗಿರುವ ಮೈಸೂರು ಮೇಯರ್ ಆಯ್ಕೆ ಚುನಾವಣೆಯಲ್ಲಿ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ವಿರುದ್ಧ ಕೇಳಿ ಬಂದಿರುವ ಆರೋಪ, ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಸಮಾಧಾನ, ಮುಂಬರುವ ದಿನಗಳಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕೈಗೊಳ್ಳುವ ಜನಧ್ವನಿ ಜಾಥಾ ಯಶಸ್ವಿಗೊಳಿಸುವ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಹೋರಾಟಗಳು ಹಾಗೂ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ನಿರ್ಣಯಗಳ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.