ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಲಭಿಸಿದೆ. ಕಳೆದ ಕೆಲ ತಿಂಗಳಿಂದ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿತ್ತು. ಕಳೆದ ವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇವರ ಹೆಸರನ್ನೇ ಹೈಕಮಾಂಡ್ಗೆ ಕಳುಹಿಸಿಕೊಡಲಾಗಿತ್ತು. ಆದರೆ ಅವರೇ ತಮ್ಮ ಹೆಸರನ್ನು ಪ್ರಕಟಿಸದಂತೆ ಮನವಿ ಮಾಡಿದ್ದರು.
ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಚರ್ಚಿಸಿ ಬರುವುದಾಗಿ ತಿಳಿಸಿದ್ದರು. ಈ ನಿಟ್ಟಿನಲ್ಲಿ ದೆಹಲಿಗೆ ತೆರಳಿ ಮಾತುಕತೆ ನಡೆಸಿ ವಾಪಸಾಗಿರುವ ಅವರು ಇದೀಗ ಅಭ್ಯರ್ಥಿಯೆಂದು ಖಚಿತವಾಗಿದ್ದಾರೆ. ಇಂದು ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸತೀಶ್ ಜಾರಕಿಹೊಳಿ ಅವರೇ ನಮ್ಮ ಅಭ್ಯರ್ಥಿ. ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ, ಅವರೇ ಪಕ್ಷದಿಂದ ಕಣಕ್ಕಿಳಿಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಕೊರೊನಾ ಎರಡನೇ ಅಲೆ: ಬಿಗಿ ಮಾರ್ಗಸೂಚಿ ಹೊರಡಿಸಿ ರಾಜ್ಯ ಸರ್ಕಾರ ಆದೇಶ
ಮೂಲಗಳ ಪ್ರಕಾರ ಪಕ್ಷದಿಂದ ಈಗಾಗಲೇ ಸತೀಶ್ ಜಾರಕಿಹೊಳಿ ಬಿ ಫಾರಂ ಸ್ವೀಕರಿಸಿದ್ದು, ಈ ವಾರದಲ್ಲಿ ನಾಮಪತ್ರ ಸಲ್ಲಿಕೆ ಕೂಡ ಮಾಡಲಿದ್ದಾರೆ ಎಂಬ ಮಾಹಿತಿ ಇದೆ. ಇವರ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ. ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಸತತ ನಾಲ್ಕು ಅವಧಿಗೆ ಆಯ್ಕೆಯಾಗಿ ಕೇಂದ್ರ ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸುರೇಶ್ ಅಂಗಡಿ ಪ್ರಭಾವ ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಸ್ಪರ್ಧೆಗೆ ಸೂಕ್ತ ಅಭ್ಯರ್ಥಿಯ ಹುಡುಕಾಟ ನಡೆಸಿದ ಕಾಂಗ್ರೆಸ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆದ ಬಳಿಕ ತಮ್ಮ ಅಭ್ಯರ್ಥಿಯನ್ನು ಘೋಷಿಸಲು ಬಿಜೆಪಿ ತೀರ್ಮಾನಿಸಿದ್ದು, ಒಂದೆರಡು ದಿನಗಳಲ್ಲಿ ಕಮಲ ಕೂಡ ತನ್ನ ಅಭ್ಯರ್ಥಿಯ ಹೆಸರು ಪ್ರಕಟಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆಗಳಿಗೆ ಮುಂದಿನ ತಿಂಗಳು 17ರಂದು ಉಪಚುನಾವಣೆ ನಡೆಯಲಿದೆ.