ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ರಾಜ್ಯದಲ್ಲಿ ರಾಜಕೀಯ ಪ್ರೇರಿತವಾಗಿ ದೂರು ದಾಖಲಿಸಲಾಗಿದೆ. ಇದರ ವಿರುದ್ಧ ಸರ್ಕಾರ ಗಮನಹರಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದ ನಿಯೋಗ ವಿಧಾನಸೌಧದಲ್ಲಿ ಇಂದು ಸಂಜೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕ್ರಮವನ್ನು ಖಂಡಿಸುತ್ತೇನೆ. ಸಾಗರ ಠಾಣೆ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಈಶ್ವರ್ ಖಂಡ್ರೆ ಒತ್ತಾಯಿಸಿದರು.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪೊಲೀಸ್ ಠಾಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪ್ರಧಾನಿ ಮೋದಿ ಪಿಎಂ ಕೇರ್ಸ್ ಫಂಡ್ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮೇ 11ರಂದು ಟ್ವೀಟ್ ಮಾಡಲಾಗಿತ್ತು. ಪ್ರಧಾನಮಂತ್ರಿ ಮೋದಿಯವರನ್ನು ಅವಹೇಳನ ಮಾಡಿದ ಆರೋಪದಲ್ಲಿ ಸಾಗರದ ವಕೀಲ ಪ್ರವೀಣ್ ಎಂಬುವವರು ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ.
ಕೇಂದ್ರ ಸರ್ಕಾರ ಮತ್ತು ಮೋದಿ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ಸೋನಿಯಾ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಕೀಲ ಪ್ರವೀಣ್ ದೂರಿನಲ್ಲಿ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಐಪಿಸಿ ಸೆಕ್ಷನ್ 153 ಮತ್ತು 505(1) (ಬಿ) ಅಡಿ ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬಿಜೆಪಿ ಕಾರ್ಯಕರ್ತ ಹಾಗೂ ಸಾಗರದ ವಕೀಲ ಪ್ರವೀಣ್ ಎಂಬುವವರು ಸಾಗರದ ಪೊಲೀಸ್ ಠಾಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ್ದರು. ಈ ದೂರನ್ನು ಸ್ವೀಕರಿಸಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಕೇಸ್ ದಾಖಲಿಸಿಕೊಂಡಿರುವ ಸಾಗರದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.