ಬೆಂಗಳೂರು: ಮುಂಬರುವ ಉಪ ಚುನಾವಣೆಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ವರದಿ ಸಲ್ಲಿಸಲು ಸಮಿತಿ ರಚನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.
ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭೆಗೆ ಯಾವುದೇ ಸಂದರ್ಭದಲ್ಲಿಯೂ ಉಪಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಕೊರೊನಾ ಮಹಾಮಾರಿಗೆ ತುತ್ತಾಗಿ ನಿಧನರಾದ ಬೆಳಗಾವಿ ಸಂಸದ ಹಾಗೂ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಹಾಗೂ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ನಿಧನದಿಂದ ತೆರವಾಗಿರುವ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ.
ನ. 10ರ ನಂತರ ಸಮಿತಿ ರಚನೆ:
ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ತಕ್ಷಣ ಎರಡೂ ಕ್ಷೇತ್ರಗಳಿಗೆ 8 ರಿಂದ 10 ಸಮಿತಿ ರಚಿಸಿ ಕ್ಷೇತ್ರಗಳಲ್ಲಿ ಯಾರು ಅಭ್ಯರ್ಥಿಯಾದರೆ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ ಎನ್ನುವ ಕುರಿತು ಸ್ಥಳೀಯ ಶಾಸಕರು ಹಾಗೂ ಪಕ್ಷದ ಮುಖಂಡರ ಅಭಿಪ್ರಾಯ ಪಡೆದು ವರದಿ ಸಲ್ಲಿಸಲು ಸಮಿತಿಗೆ ಸೂಚಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಮಸ್ಕಿ ಅಭ್ಯರ್ಥಿ ಆಯ್ಕೆ ಸಮಿತಿ:
ಈಗಾಗಲೇ ಮಸ್ಕಿ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಆಯ್ಕೆ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಆ ಸಮಿತಿ ಸಲಹೆ ಮೇರೆಗೆ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರುವಿಹಾಳ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ. ಅವರು ನ.22 ರಂದು ಕ್ಷೇತ್ರದಲ್ಲಿಯೇ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು, ಅವರೇ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
ಹಿಂದೆ ತಿಳಿಸಿದ ಪ್ರಕಾರ ಸೋಮವಾರ ಬಸವನಗೌಡ ತುರುವೀಹಾಳ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾಹಿತಿ ಇತ್ತು. ಆದರೆ ಸಮಾರಂಭ ಹಮ್ಮಿಕೊಂಡು ಕ್ಷೇತ್ರದಲ್ಲಿಯೇ ಕಾಂಗ್ರೆಸ್ ಸೇರ್ಪಡೆಯಾದರೆ ಜನರಿಗೆ ಒಂದು ಉತ್ತಮ ಸಂದೇಶ ತಲುಪುತ್ತದೆ ಎಂಬ ಆಶಯವನ್ನು ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ನಿನ್ನೆ ಮನವರಿಕೆ ಮಾಡಿದ್ದಾರೆ. ಈ ಹಿನ್ನೆಲೆ ಸಮಾರಂಭವನ್ನು ನ.22ರಂದು ಹಮ್ಮಿಕೊಳ್ಳಲು ಕಾಂಗ್ರೆಸ್ ತೀರ್ಮಾನಿಸಿದೆ.