ಬೆಂಗಳೂರು: ಮೋದಿ ಉಪನಾಮ ಕುರಿತು ವಿವಾದಾತ್ಮಕ ಹೇಳಿಕೆ ಕುರಿತಾದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಿನ್ನಡೆಯಾಗಿದೆ. ಅಲ್ಲದೆ, ಲೋಕಸಭೆಯ ಸಂಸದ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ನಿಂದ ಇಂದು ಮೌನ ಸತ್ಯಾಗ್ರಹ ನಡೆಯುತ್ತಿದೆ.
-
#WATCH | Karnataka Congres leaders hold a silent protest in Bengaluru, to express solidarity with Rahul Gandhi in the wake of Gujarat High Court upholding Sessions Court's order denying stay on his conviction in the defamation case against 'Modi surname' remark.
— ANI (@ANI) July 12, 2023 " class="align-text-top noRightClick twitterSection" data="
CM Siddaramaiah… pic.twitter.com/npV96Zo3cw
">#WATCH | Karnataka Congres leaders hold a silent protest in Bengaluru, to express solidarity with Rahul Gandhi in the wake of Gujarat High Court upholding Sessions Court's order denying stay on his conviction in the defamation case against 'Modi surname' remark.
— ANI (@ANI) July 12, 2023
CM Siddaramaiah… pic.twitter.com/npV96Zo3cw#WATCH | Karnataka Congres leaders hold a silent protest in Bengaluru, to express solidarity with Rahul Gandhi in the wake of Gujarat High Court upholding Sessions Court's order denying stay on his conviction in the defamation case against 'Modi surname' remark.
— ANI (@ANI) July 12, 2023
CM Siddaramaiah… pic.twitter.com/npV96Zo3cw
ಪಕ್ಷದಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಮೌನ ಸತ್ಯಾಗ್ರಹ ನಡೆಸಲಾಗುತ್ತಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಪಾಲ್ಗೊಂಡರು. ರಾಹುಲ್ ಅರ್ಜಿ ವಜಾದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರ್ಕಾರ ಪಿತೂರಿ ರೂಪಿಸಿದೆ. "ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ. ಕುತಂತ್ರದಿಂದ ಸತ್ಯವನ್ನು ಮುಚ್ಚಿಡಲಾಗದು. ಕುತಂತ್ರಿ ಬಿಜೆಪಿಗೆ ಧಿಕ್ಕಾರ. ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ" ಎಂಬಿತ್ಯಾದಿ ಭಿತ್ತಿ ಪತ್ರಗಳನ್ನ ಹಿಡಿದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮಂತ್ರಿಗಳಾದ ಕೆ.ಹೆಚ್ ಮುನಿಯಪ್ಪ, ರಾಮಲಿಂಗಾ ರೆಡ್ಡಿ, ಬೋಸರಾಜ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಿ ರಾಹುಲ್ ಗಾಂಧಿಯವರಿಗೆ ಬೆಂಬಲ ವ್ಯಕ್ತಪಡಿಸಿದರು.
ಹುಬ್ಬಳ್ಳಿ, ಕಾರವಾರದಲ್ಲಿಯೂ ಮೌನ ಪ್ರತಿಭಟನೆ: ಲೋಕಸಭೆಯ ಸಂಸದ ಸ್ಥಾನದಿಂದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ನಿಂದ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯ ಮುಖ್ಯದ್ವಾರದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಸಾಬೀತುಪಡಿಸಲು ಹಾಗೂ ಅವರನ್ನು ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರದ ಬಿಜೆಪಿ ಸರ್ಕಾರ ಹುನ್ನಾರ ಮಾಡಿದೆ. ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ ಕುಮಾರ್ ಪಾಟೀಲ್, ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ, ಮುಖಂಡರಾದ ಸದಾನಂದ ಡಂಗಣವರ, ಡಾ. ಶರಣಪ್ಪ ಕೊಟಗಿ, ಎ.ಎಂ.ಹಿಂಡಸಗೇರಿ, ಸತೀಶ್ ಮೆಹರವಾಡೆ, ರಾಜಶೇಖರ ಮೆಣಸಿನಕಾಯಿ, ಬಂಗಾರೇಶ್ ಹಿರೇಮಠ ಸೇರಿದಂತೆ ಮುಖಂಡರು ಭಾಗಿಯಾಗಿದ್ದರು.
ಕಾರವಾರದಲ್ಲಿ ಬಾಯಿಗೆ ಕಪ್ಪು ಪಟ್ಟಿ ಕಟ್ಟಿ ಪ್ರತಿಭಟನೆ: ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸುವಲ್ಲಿ ಬಿಜೆಪಿ ಕುತಂತ್ರ ನಡೆಸಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು ಕಾರವಾರದಲ್ಲಿಯೂ ಮೌನ ಪ್ರತಿಭಟನೆ ನಡೆಸಿದರು. ನಗರಸಭೆಯ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ ಸೇರಿದ 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಬಾಯಿಗೆ ಕಟ್ಟಿಕೊಂಡು ಮೌನ ಪ್ರತಿಭಟನೆ ನಡೆಸಿದರು.
ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅವರ ಅನರ್ಹತೆ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದ್ದು, ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಲಿದ್ದಾರೆ. ಅಲ್ಲಿ ಅವರಿಗೆ ನ್ಯಾಯ ಸಿಗುವ ವಿಶ್ವಾಸ ಇದೆ. ಆದರೆ ಬಿಜೆಪಿಯವರು ಅವರನ್ನು ಅವಮಾನಿಸುತ್ತಿದ್ದಾರೆ. ಈ ರೀತಿ ದ್ವೇಶ ರಾಜಕಾರಣವನ್ನು ಕಾರವಾರದ ಬ್ಲಾಕ್ ಕಾಂಗ್ರೆಸ್ ಖಂಡಿಸುತ್ತದೆ. ಅಲ್ಲದೆ ಮುಂದೆ ರಾಹುಲ್ ಗಾಂಧಿಯೇ ಪ್ರಧಾನಿಯೂ ಆಗಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ್ ನಾಯ್ಕ ವಿಶ್ವಾಸ ವ್ಯಕ್ತಪಡಿಸಿದರು.
ಹಾವೇರಿಯಲ್ಲಿ ಮೌನ ಪ್ರತಿಭಟನೆ: ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಹಾವೇರಿಯ ಮೈಲಾರ ಮಹದೇವಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸರ್ಕಾರ ಸೇಡಿನ ಕ್ರಮ ಕೈಗೊಳ್ಳುತ್ತಿದೆ. ರಾಹುಲ್ ಗಾಂಧಿ ದೋಷಿ ಎಂದು ಸಾಬೀತುಪಡಿಸಲು ಅಲ್ಲದೇ ಅವರನ್ನ ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವ ಎಲ್ಲ ಕ್ರಮಗಳನ್ನ ಬಿಜೆಪಿ ಅನುಸರಿಸುತ್ತಿದೆ.
ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶದಂತೆ ಪ್ರತಿಭಟನೆ ನಡೆಸಲಾಯಿತು. ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಹಿರೇಮಠ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೋಟ್ರೇಶಪ್ಪ ಸೇರಿದಂತೆ ವಿವಿಧ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕೇಂದ್ರದ ವಿರುದ್ಧ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮೌನ ಪ್ರತಿಭಟನೆ: ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಗಾಂಧಿ ಪಾರ್ಕ್ನ ಗಾಂಧಿ ಪ್ರತಿಮೆ ಎದುರು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್ ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಕೇಂದ್ರ ಸರ್ಕಾರದ ರಾಜಕೀಯ ಹುನ್ನಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರವನ್ನು ಕಿತ್ತೆಸೆಯುವ ದಿನಗಳು ಬಹಳ ದೂರ ಇಲ್ಲ. ರಾಹುಲ್ ಗಾಂಧಿಯವರ ಜನಪ್ರಿಯತೆ ಸಹಿಸದ ಕೇಂದ್ರ ಬಿಜೆಪಿ ಸರ್ಕಾರ ಅವರ ಕುಟುಂಬದ ಮೇಲೆ ರಾಜಕೀಯ ದ್ವೇಷ ಸಾರುತ್ತಿದೆ. ರಾಹುಲ್ ಗಾಂಧಿ ಅವರು ಒಂಟಿ ಅಲ್ಲ. ಅವರ ಜೊತೆಗೆ ಇಡೀ ದೇಶವೇ ಇದೆ. ಹಾಗಾಗಿ ಕೇಂದ್ರದ ಬಿಜೆಪಿ ಸರ್ಕಾರ ಇಂತಹ ನೀಚ ರಾಜಕೀಯ ಹುನ್ನಾರ ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಸದಸ್ಯ ಹೆಚ್.ಸಿ ಯೋಗೇಶ್, ಮಾಜಿ ಶಾಸಕ ಆರ್.ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
ಪುತ್ತೂರಿನಲ್ಲಿ ಬಾಯಿಗೆ ಕಪ್ಪು ಪಟ್ಟಿ ಕಟ್ಟಿ ಧರಣಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಅನುರ್ಜಿತಗೊಳಿಸಲು ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಇಲ್ಲಿನ ಗಾಂಧಿಕಟ್ಟೆ ಎದುರು ಮೌನ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ನಾಯಕರು ಬಾಯಿಗೆ ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು. ಆರಂಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮತ್ತು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಅವರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆಗೆ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ, ಕೃಷ್ಣಪ್ರಸಾದ್ ಅಳ್ವ, ಕಾಂಗ್ರೆಸ್ ಮುಖಂಡರಾದ ಶ್ರೀಪ್ರಸಾದ್, ಮುರಳೀಧರ ಮಠಂತಬೆಟ್ಟು, ಕಾವು ಹೇಮನಾಥ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ಮೌರೀಸ್ ಮಸ್ಕರೇನಸ್, ವೇದನಾಥ ಸುವರ್ಣ, ನಗರಸಭೆ ಮಾಜಿ ಸದಸ್ಯ ಅನ್ವರ್ ಖಾಸಿಂ ಸೇರಿದಂತೆ ಇತರ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಏನಿದು ಮೋದಿ ಉಪನಾಮ ಪ್ರಕರಣ?: 2019ರ ಏ.13ರಂದು ಕರ್ನಾಟಕದ ಕೋಲಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, 'ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ... ಇವರೆಲ್ಲರೂ 'ಮೋದಿ'ಎಂಬುದನ್ನು ಸಾಮಾನ್ಯ ಉಪನಾಮವಾಗಿ ಹೊಂದಿದ್ದಾರೆ. ಈ ರೀತಿಯ ಸರ್ನೇಮ್ ಹೊಂದಿರುವವರೆಲ್ಲರೂ ಕಳ್ಳರು' ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.
ರಾಹುಲ್ ಗಾಂಧಿ ಇಡೀ ಮೋದಿ ಸಮುದಾಯವನ್ನು ದೂಷಿಸಿದ್ದಾರೆ ಎಂದು ಆರೋಪಿಸಿ ಸೂರತ್ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ರಾಗಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. 2019ರ ಅಕ್ಟೋಬರ್ನಲ್ಲಿ ಕೋರ್ಟ್ ಮುಂದೆ ಹಾಜರಾಗಿದ್ದ ರಾಹುಲ್, ಇದೊಂದು ಸುಳ್ಳು 'ಮಾನಹಾನಿ ಪ್ರಕರಣ' ಎಂದು ಹೇಳಿದ್ದರು. ಈ ವಿವಾದಾತ್ಮಕ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿದ ನಂತರ ರಾಹುಲ್ ಗಾಂಧಿ ಅವರು ಲೋಕಸಭೆಯ ಸದಸ್ಯತ್ವವನ್ನು ಕಳೆದುಕೊಂಡಿದ್ದರು.
ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ