ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಮೇಲಿಂದ ಮೇಲೆ ಸಭೆ ನಡೆಸುತ್ತಿದ್ದಾರೆ. ಪಕ್ಷದ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ರಾಜರಾಜೇಶ್ವರಿ ನಗರದ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರಸಲ್ಲಿಕೆಗೆ ಮುನ್ನ ಹಾಗೂ ನಂತರ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಗ್ಲೋಬಲ್ ಕಾಲೇಜು ಆವರಣದಲ್ಲಿ 2 ಹಂತದಲ್ಲಿ ಸಭೆ ನಡೆಸಲಾಗಿದೆ. ನಾಮಪತ್ರ ಸಲ್ಲಿಕೆಗೆ ಮುನ್ನ ಕಾಂಗ್ರೆಸ್ ನಾಯಕರು ಯಾವ ರೀತಿ ಭಾಗವಹಿಸಬೇಕು? ಎಷ್ಟು ಮಂದಿ ತೆರಳಬೇಕು? ನಾಮಪತ್ರ ಪರಿಶೀಲನೆಗೆ ನಾವು ತೆರಳುವ ಮುನ್ನವೇ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುತ್ತಾರೆ. ಇವರಿಗಿಂತ ಭಿನ್ನವಾಗಿ ನಾವು ಯಾವ ರೀತಿ ಗುರುತಿಸಿಕೊಳ್ಳಬೇಕು ಎಂಬ ಕುರಿತು ಸುದೀರ್ಘ ಚರ್ಚೆ ನಡೆಸಿ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ತೆರಳಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಎಲ್ಲಾ ನಾಯಕರು ಒಟ್ಟಾಗಿ ಮತ್ತೊಮ್ಮೆ ಗ್ಲೋಬಲ್ ಕಾಲೇಜಿನಲ್ಲಿ ಸಭೆ ಸೇರಿ ಮುಂದಿನ ಪ್ರಚಾರ ಕಾರ್ಯತಂತ್ರಗಳ ಕುರಿತು ಚರ್ಚಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಗೆಲುವಿಗೆ ಯಾವ ರೀತಿ ಪರಿಶ್ರಮ ಹಾಕಬೇಕು ಎಂಬ ಕುರಿತು ಚರ್ಚೆ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಮುನಿರತ್ನ ಕೂಡ ಕಾರಣರಾಗಿದ್ದು, ಇವರನ್ನು ಸೋಲಿಸುವ ಮೂಲಕ ಜನ ಬಿಜೆಪಿಗೆ ಹಾಗೂ ಆಪರೇಷನ್ ಕಮಲಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂಬುದನ್ನು ತೋರಿಸಿಕೊಡಬೇಕಾಗಿದೆ. ಅಲ್ಲದೆ ನಮ್ಮಿಂದ ಕೈ ತಪ್ಪಿರುವ ಕ್ಷೇತ್ರವನ್ನು ಮರಳಿ ಪಡೆಯಬೇಕಿದೆ. ಈ ನಿಟ್ಟಿನಲ್ಲಿ ಪಕ್ಷದ ಎಲ್ಲಾ ನಾಯಕರು ಸಾಂಗಿಕ ಹೋರಾಟ ನಡೆಸಬೇಕು ಎಂದು ನಾಯಕರು ಸೂಚಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಈ ಗೆಲುವನ್ನು ಅತ್ಯಂತ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು, ಪ್ರತೀ ವಾರ್ಡ್ ಮಟ್ಟದಲ್ಲಿ ಮತ್ತು ಬೂತ್ ಮಟ್ಟದಲ್ಲಿ ವೀಕ್ಷಕರು ಹಾಗೂ ಉಸ್ತುವಾರಿಗಳನ್ನು ನೇಮಿಸಿದೆ. ಎಲ್ಲರೂ ಅತ್ಯಂತ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಪಕ್ಷ ಗೆಲ್ಲಿಸುವ ಕಾರ್ಯ ಮಾಡಬೇಕು. ಪ್ರತಿಯೊಬ್ಬ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತದಾರರ ಮನವೊಲಿಸುವ ಕಾರ್ಯ ಮಾಡಬೇಕು ಎಂದು ಸೂಚನೆ ನೀಡಿದರು. ಉಸ್ತುವಾರಿ ವಹಿಸಿಕೊಂಡಿರುವ ಮುಖಂಡರು ಕ್ಷೇತ್ರದಲ್ಲಿಯೇ ಬೀಡುಬಿಟ್ಟು ಗೆಲುವಿಗೆ ಅಗತ್ಯ ಕ್ರಮ ವಹಿಸಬೇಕು ಎಂಬ ಸೂಚನೆ ನೀಡಲಾಯಿತು.