ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಹೆಚ್ಚಿನ ಸ್ಥಾನವನ್ನು ಮರಳಿ ಗಳಿಸಲು ನಿರ್ಧರಿಸಿರುವ ಕಾಂಗ್ರೆಸ್ ನಾಯಕರು ಮೇಲಿಂದ ಮೇಲೆ ಸಭೆ ನಡೆಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಆರ್ಪುರ ವಿಧಾನಸಭಾ ಕ್ಷೇತ್ರದ ಮುಖಂಡರ ಸಭೆ ನಡೆಯಿತು. ಪಕ್ಷದಿಂದ ಅನರ್ಹಗೊಂಡಿರುವ ಶಾಸಕ ಭೈರತಿ ಬಸವರಾಜು ವಿರುದ್ಧ ಮುಂಬರುವ ಉಪಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಇಂದು ಸುದೀರ್ಘ ಚರ್ಚೆ ನಡೆದಿದೆ. ಈ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿರುವ ಆಕಾಂಕ್ಷಿ ಅಭ್ಯರ್ಥಿಗಳು ಹಾಗೂ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡರು ಸೇರಿ ಸಭೆ ನಡೆಸಿದ್ದಾರೆ.
ಇದು ಮೊದಲ ಸಭೆಯಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಸಭೆ ನಡೆಯುತ್ತಿದ್ದು, ಈಗಾಗಲೇ ಹೊಸಕೋಟೆ, ಕೆಆರ್ಪುರಂ ಕ್ಷೇತ್ರಗಳಲ್ಲಿ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ 17 ಕ್ಷೇತ್ರಗಳ ಮುಖಂಡರ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಬಹುತೇಕ ಮುರಿದಿದ್ದು, ಎಲ್ಲಾ 17 ಕ್ಷೇತ್ರಕ್ಕೂ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿವೆ. ಈ ಹಿನ್ನೆಲೆ ಕಾಂಗ್ರೆಸ್‌ನ ಎಲ್ಲಾ 17 ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೊನ್ನೆ ನಾವು ಹೊಸಕೋಟೆ ನಾಯಕರ ಜೊತೆ ಚರ್ಚಿಸಿದ್ದೇವೆ. ಇಂದು ಕೆಆರ್ಪುರಂ ಮುಖಂಡರ ಸಭೆ ನಡೆದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಭೆ ನಡೆಸಲಿದ್ದೇವೆ. ಎಲ್ಲಾ ಕ್ಷೇತ್ರಗಳಿಗೂ ವೀಕ್ಷಕರನ್ನು ನೇಮಿಸಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸುತ್ತಿದ್ದೇವೆ. ನಾವು ಕಳೆದುಕೊಂಡಿರುವ ಎಲ್ಲಾ ಕ್ಷೇತ್ರಗಳನ್ನೂ ಮರಳಿ ಪಡೆಯಲು ಸಂಪೂರ್ಣ ಶಕ್ತಿ ಬಳಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
14 ಕಾಂಗ್ರೆಸ್ ಶಾಸಕರನ್ನು ಕಳೆದುಕೊಂಡಿರುವ ಕಾಂಗ್ರೆಸ್ ಇದೀಗ ಈ ಎಲ್ಲಾ ಕ್ಷೇತ್ರಗಳನ್ನು ಮರಳಿ ಪಡೆಯುವ ಜೊತೆಗೆ ಜೆಡಿಎಸ್ ಕಳೆದುಕೊಂಡಿರುವ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಅಲ್ಲಿ ಕಾಂಗ್ರೆಸ್ ಪ್ರಾಬಲ್ಯದ ಸತ್ವ ಪರೀಕ್ಷೆಗೆ ಮುಂದಾಗಿದೆ. ಇದರಲ್ಲಿ ಎಷ್ಟರ ಮಟ್ಟಿನ ಯಶಸ್ಸು ಸಿಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.