ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆ ರಾಜ್ಯ ಕಾಂಗ್ರೆಸ್ ನಾಯಕರು ತಡರಾತ್ರಿವರೆಗೂ ಚರ್ಚಿಸಿದ್ದಾರೆ.
ನಿನ್ನೆ ರಾತ್ರಿ ರಾಜ್ಯಕ್ಕೆ ಆಗಮಿಸಿರುವ ಸುರ್ಜೇವಾಲಾ ಕುಮಾರಕೃಪಾ ಅತಿಥಿ ಗೃಹದಲ್ಲಿ ತಂಗಿದ್ದಾರೆ. ಅವರ ಜೊತೆ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುದೀರ್ಘ ಚರ್ಚೆ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳು ಹಾಗೂ 2023ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುವ ಕಾರ್ಯದಲ್ಲಿ ಅಗತ್ಯವಿರುವ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಾಗಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಹೊಸದಾಗಿ ನೇಮಕಗೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೂಡ ಹೊಸದಾಗಿ ನೇಮಕವಾಗಿರುವ ಹಿನ್ನೆಲೆ ಅಗತ್ಯ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ತಡರಾತ್ರಿ ನಡೆದ ಸಭೆ ಅತ್ಯಂತ ಪ್ರಮುಖವಾಗಿ ಪರಿಗಣಿಸಲ್ಪಟ್ಟಿದೆ. ಹೊಸದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆಗಿ ನೇಮಕಗೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.