ಬೆಂಗಳೂರು: ಕೇಂದ್ರ ಸರ್ಕಾರ ಜನ ಹಾಗೂ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಲು ಮುಂದಾಗಿದೆ ಎಂದು ರಾಜ್ಯಪಾಲರಿಗೆ ದೂರು ನೀಡಲು ಕಾಂಗ್ರೆಸ್ ನಾಯಕರು ರಾಜಭವನಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಗೆ ತರುವುದನ್ನು ಖಂಡಿಸಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ದೂರು ಸಲ್ಲಿಕೆಗೆ ರಾಜ್ಯಪಾಲ ವಜುಭಾಯ್ ವಾಲಾ ಕಾಲಾವಕಾಶ ನೀಡಿದ್ದು, ಇದೀಗ ದೂರು ಸಲ್ಲಿಕೆಗೆ ಕಾಂಗ್ರೆಸ್ ನಾಯಕರು ತೆರಳಿದ್ದಾರೆ.
ದೂರು ಸಲ್ಲಿಸಲು ಹಾಗೂ ರಾಜಭವನದ ಒಳಗೆ ತೆರಳಲು ನಾಲ್ಕರಿಂದ ಐದು ನಾಯಕರಿಗೆ ರಾಜ್ಯಪಾಲರು ಅನುಮತಿ ನೀಡಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರ ನಾಯಕರು ರಾಜಭವನದತ್ತ ಪ್ರಯಾಣ ಬೆಳೆಸಿದ್ದಾರೆ.
ಧರಣಿನಿರತ ಸ್ಥಳದಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಭಾಷಣ ಮುಂದುವರೆಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು, ರಾಷ್ಟ್ರೀಯ ನಾಯಕ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ.