ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಯಾವ ತಂತ್ರವೂ ಇಲ್ಲ. ಇವೆಲ್ಲಾ ಬಿಜೆಪಿಯವರು ಸೃಷ್ಟಿಸುತ್ತಿರುವ ಆರೋಪಗಳಷ್ಟೇ. ಅವರು ಕಟ್ಟುಕತೆ ಕಟ್ಟುತ್ತಿದ್ದಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆ ನಡೆದಿದೆ. ಈ ವೇಳೆ ಕಾರ್ಮಿಕ ಇಲಾಖೆ ಖರ್ಚು ವೆಚ್ಚದ ಬಗ್ಗೆ ಚರ್ಚೆಯಾಗಬೇಕಿತ್ತು. ಆದರೆ ಈ ವಿಚಾರ ಪ್ರಸ್ತಾಪವಾಗಲಿಲ್ಲ. ಅಬಕಾರಿ ಇಲಾಖೆ ಅವ್ಯವಹಾರದ ಬಗ್ಗೆ ಚರ್ಚಿಸಲಾಗಿದೆ. ಎಲ್ಲಾ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಸಮಿತಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಖಂಡ್ರೆ, ನಮ್ಮ ನಮ್ಮ ವ್ಯಾಪ್ತಿಯಲ್ಲಿ ನಾವು ಜಾಗರೂಕರಾಗಿದ್ದೇವೆ. ಜನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆದಿದೆ. ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭೀತಿ ಹೆಚ್ಚಾಗಿದೆ. ಅಲ್ಲಿಯೂ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ ಇನ್ನೂ ಸರಿಯಾದ ಕ್ರಮಗಳನ್ನು ಸರ್ಕಾರ ಕೈಗೊಂಡಿಲ್ಲ ಎಂದು ಆರೋಪಿಸಿದರು.