ಬೆಂಗಳೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನದ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರು ಟ್ವೀಟ್ ಮೂಲಕ ಶುಭಕೋರಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ನಲ್ಲಿ, ಶ್ರದ್ಧಾವಂತ ಪ್ರಜಾಪ್ರಭುತ್ವವಾದಿ, ಬದ್ಧತೆಯ ಸಾಮಾಜಿಕ ನ್ಯಾಯದ ಹರಿಕಾರ, ದೂರದೃಷ್ಟಿಯ ಆಡಳಿತಗಾರ, ನಮ್ಮ ನಾಡಿನ ಹೆಮ್ಮೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಗೌರವದಿಂದ ನಮಿಸುತ್ತೇನೆ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮ ಟ್ವೀಟ್ ನಲ್ಲಿ, ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ ಕೃಷ್ಣರಾಜ ಸಾಗರ ಹಾಗೂ ಬೃಹತ್ ಜಲ ವಿದ್ಯುತ್ ಕೇಂದ್ರವನ್ನು ಸ್ಥಾಪಿಸಿ, ನಾಡಿಗೆ ಮೈಸೂರು ವಿಶ್ವವಿದ್ಯಾಲಯ, ಮೈಸೂರು ಬ್ಯಾಂಕ್, ಕನ್ನಡ ಸಾಹಿತ್ಯ ಪರಿಷತ್ ಅನ್ನು ನೀಡಿದ, ಮೈಸೂರು ಸಂಸ್ಥಾನದ ನವ ನಿರ್ಮಾತೃ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಜಯಂತಿಯಂದು ಅವರನ್ನು ಗೌರವ ಪೂರ್ವಕವಾಗಿ ನೆನೆಯುತ್ತೇನೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿ, ಕೃಷ್ಣರಾಜ ಸಾಗರ ನಿರ್ಮಾಣ, ಜಲ ವಿದ್ಯುತ್ ಕೇಂದ್ರ, ಮೈಸೂರು ವಿವಿ, ಕನ್ನಡ ಸಾಹಿತ್ಯ ಪರಿಷತ್ ಅನ್ನು ಸ್ಥಾಪಿಸಿ, ದೇವದಾಸಿ, ಬಸವಿ ಪದ್ಧತಿ ನಿಷೇಧ, ಸ್ತ್ರೀಯರಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಜಾರಿ, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೀಗೆ ರಾಜ್ಯಕ್ಕೆ ಹಲವು ಕೊಡುಗೆ ನೀಡಿದ್ದಾರೆ. ಅಂತಹ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರನ್ನ ಕೃತಜ್ಞತಾ ಪೂರ್ವಕವಾಗಿ ನೆನೆಯೋಣ ಎಂದಿದ್ದಾರೆ.
ಜೊತೆಗೆ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್ ಪಾಟೀಲ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಎಚ್. ಕೆ. ಪಾಟೀಲ್, ಎಂ.ಬಿ. ಪಾಟೀಲ್, ಆರ್.ವಿ. ದೇಶಪಾಂಡೆ ಸೇರಿದಂತೆ ಹಲವು ನಾಯಕರು ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆಯನ್ನು ಕೊಂಡಾಡಿದ್ದಾರೆ.