ಬೆಂಗಳೂರು: ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆ ಸೇರಿ ಚರ್ಚಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.
ಕಾಂಗ್ರೆಸ್ ವೀಕ್ಷಕರ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಮಾರು 8 ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈ ಕ್ಷೇತ್ರಗಳ ಅಭ್ಯರ್ಥಿಗಳ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ 7 ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಇವತ್ತು ಚರ್ಚೆಯಾಗಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡುತ್ತೇವೆ ಎಂದರು.
ಡಿ .ಕೆ. ಶಿವಕುಮಾರ್ನ್ನು ರಾಜು ಕಾಗೆಯವರು ಭೇಟಿ ವಿಚಾರದ ಕುರಿತು ಪ್ರತಿಕ್ರಿಯಿಸಿ, ರಾಜು ಕಾಗೆ ಅವರು ಮಾಜಿ ಸಚಿವ ಡಿ. ಕೆ. ಶಿವಕುಮಾರ್ನ್ನು ಭೇಟಿ ಮಾಡಿರುವ ವಿಷಯ ನನಗೆ ಗೊತ್ತಿಲ್ಲ. ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಯಾರು ಬೇಕಾದರೂ ಬರಲಿ. ಆದ್ರೆ ಪಕ್ಷದ ಟಿಕೆಟ್ ನೀಡುವ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
ಇನ್ನು, ಟಿಪ್ಪು ಜಯಂತಿ ಆಚರಣೆ ವಿಚಾರವಾಗಿ ಮಾತನಾಡಿದ ದಿನೇಶ್, ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಲ್ಲ. ಖಾಸಗಿಯಾಗಿ ಜಯಂತಿ ಆಚರಣೆ ಮಾಡುವ ಬಗ್ಗೆ ಕೋರ್ಟ್ ಹೇಳಿದೆ. ಆಯಾ ಜಿಲ್ಲೆಗಳಲ್ಲಿ ಜಯಂತಿ ಆಚರಣೆ ಮಾಡಲಾಗುತ್ತೆ. ಪಕ್ಷದ ವತಿಯಿಂದ ಆಚರಣೆ ಮಾಡುವ ಬಗ್ಗೆ ಪಕ್ಷದ ಹೈಕಮಾಂಡ್ ತಿಳಿಸುತ್ತೆ ಎಂದರು.