ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇಂತಹದ್ದೊಂದು ಮಹತ್ವದ ನಿರ್ಧಾರ ಕುರಿತು ಸುಧೀರ್ಘ ಚರ್ಚೆ ನಡೆದಿದೆ.
ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಕಾಂಗ್ರೆಸ್ ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸಲು ಖರೀದಿಸಿದ ವೈದ್ಯಕೀಯ ಉಪಕರಣಗಳಲ್ಲಿ ಅವ್ಯವಹಾರ ನಡೆದಿದೆ. ಈ ಬಗ್ಗೆ ದಾಖಲೆ ಸಂಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟದ ರೂಪುರೇಷೆ ಹೆಣೆಯಲು ಡಿಕೆಶಿ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸಲು ಕೈಗೊಂಡ ಕ್ರಮಗಳ ಕುರಿತು ಹೈಕೋರ್ಟ್ಗೆ ಸಲ್ಲಿಸಿರುವ ಪ್ರಮಾಣ ಪತ್ರದ ಮಾಹಿತಿಯನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಹೆಚ್.ಕೆ.ಪಾಟೀಲ್ ಪಡೆದುಕೊಂಡಿದ್ದು, ಈ ಪ್ರಮಾಣ ಪತ್ರದ ಮಾಹಿತಿ ಆಧರಿಸಿ ಕಾಂಗ್ರೆಸ್ ನಾಯಕರು ಸಮಾಲೋಚನೆ ನಡೆಸಿದ್ದಾರೆ. ಅಲ್ಲದೇ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಂಗ್ರಹಿಸಿರುವ ಮಾಹಿತಿ ವರದಿಯನ್ನು ಹೆಚ್. ಕೆ.ಪಾಟೀಲ್, ಕೆಪಿಸಿಸಿ ಟಾಸ್ಕ್ ಫೋರ್ಸ್ ಸಮಿತಿಗೆ ನೀಡಿದ್ದಾರೆ.
ಮಾಜಿ ಸಚಿವ ಮುರುಗೇಶ್ ನಿರಾಣಿ ಪೆನ್‌ಡ್ರೈವ್ ವಿಚಾರದ ಬಗ್ಗೆಯೂ ಚರ್ಚಿಸಲಾಗಿದೆ. ಈ ಹಗರಣವನ್ನು ಹಾಗೂ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಆರೋಪವನ್ನು ದೊಡ್ಡ ಮಟ್ಟದಲ್ಲಿ ಹೋರಾಟದ ಮೂಲಕ ಜನರ ಮುಂದೆ ತೆಗೆದುಕೊಂಡು ಹೋಗಲು ಕಾಂಗ್ರೆಸ್ ನಿರ್ಧರಿಸಿದ್ದು, ಕೊರೊನಾ ಸಮಸ್ಯೆ ಜನರ ಸಂಕಷ್ಟವನ್ನಿಟ್ಟುಕೊಂಡು ಈ ಹಗರಣದ ವಿರುದ್ಧ ಪ್ರತಿಭಟಿಸಲು ತೀರ್ಮಾನಿಸಿದೆ ಎನ್ನಲಾಗಿದೆ.
ಇದೇ ವಿಚಾರವಾಗಿ ಟ್ವೀಟ್ ಮಾಡಿದ ಸಿದ್ದರಾಮಯ್ಯ ಹೋರಾಟದ ಸೂಚನೆ ನೀಡಿದ್ದರು.ಈ ನಿಟ್ಟಿನಲ್ಲಿ ಸಭೆಯಲ್ಲಿ ಕೂಡ ರಕ್ಷಣಾತ್ಮಕ ಹಾಗೂ ಕಾನೂನಾತ್ಮಕ ಹೋರಾಟ ಮಾಡಬೇಕೆಂದು ಸಲಹೆ ಕೇಳಿ ಬಂದಿದೆ. ಅಲ್ಲದೇ ಲಾಕ್ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಆಹಾರದ ಕಿಟ್ ಜೊತೆ ಕಾರ್ಮಿಕರಿಗೆ ಹಣ್ಣುಗಳನ್ನು ಹಂಚಿಕೆ ಮಾಡಿರುವ ಬಗ್ಗೆ ಸರ್ಕಾರ ನ್ಯಾಯಾಲಯಕ್ಕೆ ಅವಾಸ್ತವಿಕ ವರದಿ ಸಲ್ಲಿಸಿರುವ ಬಗ್ಗೆ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಹಿರಿಯ ನಾಯಕರಾದ ರಮೇಶ್ ಕುಮಾರ್, ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಮಾಜಿ ಸಂಸದರಾದ ಧ್ರುವನಾರಾಯಣ, ವಿ.ಎಸ್.ಉಗ್ರಪ್ಪ, ವಿಧಾನಸಭೆ ಪ್ರತಿಪಕ್ಷದ ಮುಖ್ಯ ಸಚೇತಕ ಡಾ. ಅಜಯ್ ಸಿಂಗ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.