ಬೆಂಗಳೂರು : ನಾಳೆ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಪಾಲ್ಗೊಳ್ಳಲಿದ್ದಾರೆ. ಶಾಸಕಾಂಗ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಬೆಂಗಳೂರಿಗೆ ಆಗಮಿಸಿದ ಯಶವಂತ ಸಿನ್ಹಾ ಅವರನ್ನು ಪಕ್ಷದ ಮುಖಂಡರು ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ವಿಧಾನ ಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಂ, ಕೆಪಿಸಿಸಿ ಉಪಾಧ್ಯಕ್ಷರಾದ ಅಶೋಕ್ ಪಟ್ಟಣ, ಸುಧೀಂದ್ರ ಈ ವೇಳೆ ಉಪಸ್ಥಿತರಿದ್ದರು.
ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ : ಜುಲೈ 18 ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸಿದ್ದರಾಮಯ್ಯನಾಳೆ ಕರೆದಿದ್ದಾರೆ. ಕಾಂಗ್ರೆಸ್ ಪಕ್ಷದ ಹಾಗೂ ಇತರೆ ಬೆಂಬಲಿತ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರು ಸ್ಪರ್ಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಶಾಸಕಾಂಗ ಪಕ್ಷದ ಸಭೆಯನ್ನು ಕರೆದು ಚರ್ಚಿಸಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ಪಾಲ್ಗೊಳ್ಳುವ ಯಶವಂತ್ ಸಿನ್ಹಾ ಶಾಸಕರ ಜೊತೆ ಸಮಾಲೋಚಿಸಿ ತಮಗೆ ಮತ ನೀಡುವಂತೆ ಮನವಿ ಮಾಡಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಸಂತನಗರದಲ್ಲಿರುವ 'ಶಾಂಗ್ರಿ-ಲಾ' ಹೋಟೆಲ್‌ನಲ್ಲಿ ಶಾಸಕಾಂಗ ಸಭೆಯನ್ನು ಏರ್ಪಡಿಸಲಾಗಿದೆ. ಎಲ್ಲ ಶಾಸಕರು ಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ. ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಯು.ಟಿ. ಖಾದರ್, ವಿಧಾನ ಪರಿಷತ್ತಿನ ಪ್ರತಿಪಕ್ಷದ ಉಪನಾಯಕರಾದ ಕೆ.ಗೋವಿಂದರಾಜ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಸಲೀಂ ಅಹಮದ್ ಮತ್ತು ಆರ್.ಧ್ರುವನಾರಾಯಣ್ ಉಪಸ್ಥಿತರಿರುತ್ತಾರೆ.
ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯಸಭೆ ಮತ್ತು ಲೋಕಸಭೆ ಸದಸ್ಯರು ತಪ್ಪದೆ ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಯಶವಂತ್ ಸಿನ್ಹಾ ಇಂದು ನಗರಕ್ಕೆ ಆಗಮಿಸಿದ್ದು, ಇಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಹೈದರಾಬಾದ್ ನಿಂದ ಆಗಮಿಸಿದ ಅವರನ್ನು ಕಾಂಗ್ರೆಸ್ ನಾಯಕರು ಬರಮಾಡಿಕೊಂಡಿದ್ದು, ಇಂದು ರಾತ್ರಿ ಅವರು ಶಾಂಗ್ರಿಲಾ ಹೋಟೆಲ್ ನಲ್ಲಿಯೇ ತಂಗಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಶಾಸಕಾಂಗ ಸಭೆ ಪ್ರಾರಂಭವಾಗಲಿದ್ದು, ಇದರ ಮುಕ್ತಾಯದ ಬಳಿಕ ಮಧ್ಯಾಹ್ನ 12:30ಕ್ಕೆ ಮಾಧ್ಯಮಗೋಷ್ಟಿ ಕರೆಯಲಾಗಿದೆ. ಬಳಿಕ ಸಂಜೆ ಅವರು ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಓದಿ : ಮಹಾದಾಯಿ, ಮೇಕೆದಾಟು ಯೋಜನೆ ಬಗ್ಗೆ ಎರಡ್ಮೂರು ತಿಂಗಳಲ್ಲಿ ಸಿಹಿ ಸುದ್ದಿ : ಎಂ.ಬಿ.ಮಹೇಶ್