ಬೆಂಗಳೂರು: ಬಿಜೆಪಿಯವರು ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದು, ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿಗಳು ಹಾಗೂ ಮುಖಂಡರಿಂದ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿದ್ದು, ಇದನ್ನು ಕಂಡು ಕಾಣದಂತೆ ಚುನವಣಾ ಆಯೋಗ ಕುಳಿತಿದೆ. ಆಯೋಗವು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸುತ್ತೇವೆ. ಕೇಂದ್ರ ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಹಲವಾರು ಕ್ಷೇತ್ರಗಳಲ್ಲಿ ಬಿಜೆಪಿಯವರು ಮತದಾರರಿಗೆ ಸೀರೆ ಹಂಚಿ ಆಮಿಷ ತೋರಿಸುತ್ತಿದ್ದಾರೆ. ಚುನಾವಣಾ ಆಯೋಗಕ್ಕೆ ಈ ಕುರಿತು ಕ್ರಮ ಕೈಗೊಳ್ಳುವಂತೆ ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದು, ಕೂಡಲೇ ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.