ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆ ಆರಂಭವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ.
ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟ, ಸರ್ಕಾರಗಳ ವೈಫಲ್ಯ ಖಂಡಿಸಿ ಪಾದಯಾತ್ರೆ, ಪಕ್ಷ ಸಂಘಟನೆ, ಹಿರಿಯ ನಾಯಕರಿಗೆ ಪಕ್ಷದಲ್ಲಿ ಕಲ್ಪಿಸಿಕೊಡಬಹುದಾದ ಸ್ಥಾನಮಾನ, ಉಪ ಚುನಾವಣೆಗೆ ಬಾಕಿ ಉಳಿದ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸುವುದು, ಉಪ ಚುನಾವಣೆಗೆ ಉಸ್ತುವಾರಿ ನೇಮಕ ಸೇರಿದಂತೆ ಇನ್ನಿತರ ವಿಚಾರಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದೆ.
ಇನ್ನು ಸಭೆಯಲ್ಲಿ ಮಾಜಿ ಸಚಿವ ಚೆಲುವರಾಯಸ್ವಾಮಿ, ಕೆ.ಜೆ.ಜಾರ್ಜ್, ಸಲೀಂ ಅಹಮದ್, ಟಿ.ಬಿ.ಜಯಚಂದ್ರ, ರಾಜ್ಯಸಭೆ ಸದಸ್ಯ ಬಿ.ಕೆ.ಹರಿಪ್ರಸಾದ್, ರೆಹಮಾನ್ ಖಾನ್, ರಮೇಶ್ ಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್, ಧ್ರುವನಾರಾಯಣ, ಬಸವರಾಜ್ ರಾಯರೆಡ್ಡಿ, ಉಮಾಶ್ರೀ, ರಹೀಂ ಖಾನ್, ಕೆ.ಹೆಚ್.ಮುನಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಮುಖವಾಗಿ ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್ ಹಾಗೂ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಡಿಕೆಶಿ ತಡವಾಗಿ ಬಂದರು ಎನ್ನಲಾಗಿದೆ.