ಬೆಂಗಳೂರು: ಇಂಧನ ಹಾಗೂ ಅಡುಗೆ ಅನಿಲ ಬೆಲೆ ಹೆಚ್ಚಳದಿಂದ ಜನ ತತ್ತರಿಸಿದ್ದಾರೆ. ಕೂಡಲೇ ಬೆಲೆ ಇಳಿಸುವಂತೆ ಆಗ್ರಹಿಸಿ ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ನಂತರ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ನಾಯಕರನ್ನು ಬಂಧಿಸಲಾಗಿತ್ತು. ಬೆಂಗಳೂರು ನಗರ ಕಾಂಗ್ರೆಸ್ ಘಟಕ ಹಾಗೂ ಮಹಿಳಾ ಕಾಂಗ್ರೆಸ್ ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆ ನಂತರ ರಾಜಭವನಕ್ಕೆ ಮೆರವಣಿಗೆ ಹೊರಟ ಕಾಂಗ್ರೆಸ್ ನಾಯಕರನ್ನು ಮಾರ್ಗದಲ್ಲಿ ತಡೆದು ಬಂಧಿಸಲಾಗಿತ್ತು. ಬಳಿಕ ರಾಜ್ಯಪಾಲರು ಸಂಜೆ ಭೇಟಿಗೆ ಕಾಲಾವಕಾಶ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಯೋಗ ತೆರಳಿ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಕೆ ಮಾಡಿದೆ.
ನಿಯೋಗದಲ್ಲಿ ಶಾಸಕ ರಿಝ್ವಾನ್ ಅರ್ಷದ್, ಎಂಎಲ್ಸಿ ಯು.ಬಿ ವೆಂಕಟೇಶ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಇದ್ದರು. ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳು ಭಾಗಿಯಾಗಿದ್ದರು.
ಕಾಂಗ್ರೆಸ್ ನಿಯೋಗದ ಭೇಟಿ ಬಳಿಕ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ ಮಾತನಾಡಿ, ಬೆಳಗ್ಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಸಾಮಾನ್ಯ ಜನರಿಗೆ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಹಾಗಾಗಿ ನೀವು ಮಧ್ಯಪ್ರವೇಶ ಮಾಡಬೇಕು. ರಾಷ್ಟ್ರಪತಿಗಳಿಗೆ ನಮ್ಮ ಪತ್ರ ಕಳುಹಿಸಬೇಕು. ಬೆಲೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು. ಈ ಬಗ್ಗೆ ಮನವಿ ಮಾಡಿದ್ದೇವೆ. ರಾಜ್ಯಪಾಲರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ದೇಶದಲ್ಲಿ ಯಾವ ಪರಿಸ್ಥಿತಿಯಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಸಾಮಾನ್ಯ ಮನುಷ್ಯ ಜೀವನ ಸಾಗಿಸಲು ಏನು ಕಷ್ಟ ಅನುಭವಿಸುತ್ತಿದ್ದಾರೆ ಎಂಬುದನ್ನು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ನಮ್ಮ ಮಾತನ್ನು ರಾಜ್ಯಪಾಲರು ತಾಳ್ಮೆಯಿಂದ ಕೇಳಿಸಿಕೊಂಡಿದ್ದಾರೆ. ಬಂಡವಾಳಶಾಹಿಗಳಿಗೆ ಮಾರಾಟ ಮಾಡ್ತಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದ್ದೇವೆ. ದೇಶ ಸಂಪತ್ತು ಉಳಿಸುವ ನಿಟ್ಟಿನಲ್ಲಿ ಪಿಎಂಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ವಿವರಿಸಿದರು.
ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಡಾ.ಪುಷ್ಪ ಅಮರನಾಥ್ ಮಾತನಾಡಿ, ಬೆಲೆ ಏರಿಕೆಯಿಂದ ದೇಶದ ಜನರು ಬೇಸತ್ತಿದ್ದಾರೆ, ಇಂತಹ ಹೀನ ಪರಿಸ್ಥಿತಿಯಲ್ಲಿ ರಾಷ್ಟ್ರಪತಿಗಳೇ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿ, ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದ್ದೇವೆ. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ತಾವು ವೈಯಕ್ತಿಕವಾಗಿ ಕೂಡ ರಾಜ್ಯಪಾಲರಿಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದ್ದಾಗಿ ತಿಳಿಸಿದರು.