ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಸಮ್ಮತಿ ನೀಡಬೇಕು ಹಾಗೂ ಶಂಕುಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರವನ್ನು ಯೋಜನೆಗೆ ಆಗ್ರಹಿಸುವ ಜತೆಗೆ, ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ರಾಜಕೀಯ ಲಾಭಕ್ಕಾಗಿ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ವಿರೋಧಿಸುತ್ತಿರುವುದನ್ನು ಖಂಡಿಸಿ ಪ್ರತಿಕೃತಿ ದಹಿಸಲಾಯಿತು.
ಕಾವೇರಿ ನದಿ ನೀರಿನ ವಿಷಯದಲ್ಲಿ ಅನಾವಶ್ಯಕವಾಗಿ ತಮಿಳುನಾಡು ಅಪಪ್ರಚಾರವನ್ನು ಹೆಚ್ಚಿಸುತ್ತಲೇ ಇದೆ. ಆದರೆ, ವಾಸ್ತವಾಂಶದ ಮಾಹಿತಿ ಪಡೆಯದೇ ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರ ನಿರಂತರವಾಗಿ ವಿರೋಧ ವ್ಯಕ್ತಪಡಿಸುತ್ತಲೇ ಇದೆ. ಇದು ಕೇವಲ ರಾಜಕೀಯ ಲಾಭಕ್ಕಾಗಿ ಮಾತ್ರ ಅಲ್ಲಿನ ಪಕ್ಷಗಳು ನಿರಂತರವಾಗಿ ಇಂತಹ ವಿರೋಧವನ್ನ ವ್ಯಕ್ತಪಡಿಸುತ್ತಲೇ ಬಂದಿದೆ.
ಆದರೆ, ಕೇಂದ್ರ ಸರ್ಕಾರ ಕೂಡಲೇ ಹಿಂದಿನ ಕಾಂಗ್ರೆಸ್ ಸರ್ಕಾರ ಸಿದ್ಧಪಡಿಸಿರುವ ಡಿಪಿಆರ್ಗೆ ಮಂಜೂರಾತಿ ನೀಡಿ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೂಡಲೇ ಅನುಮತಿ ನೀಡಬೇಕೆಂದು ಕೈ ಮುಖಂಡರು ಆಗ್ರಹಿಸಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ ಎಂಬ ಮಾತನ್ನು ಈಗಾಗಲೇ ಹೇಳಿದ್ದಾರೆ. ಕೇಂದ್ರ ಸರ್ಕಾರದ ಮೂಲಕ ಅನುಮತಿ ಪಡೆಯುತ್ತೇವೆ ಎಂದಿದ್ದಾರೆ.
ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ. ಆದರೆ, ಕೂಡಲೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಜನಪರ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಬೇಕು. ಕರ್ನಾಟಕದಿಂದ ಇಪ್ಪತ್ತೈದು ಸಂಸದರು ಬಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದರೆ ರಾಜ್ಯದ ಜಲ ನೆಲದ ಬಗ್ಗೆ ಹೋರಾಟ ನಡೆಸುವ ಆತ್ಮಸ್ಥೈರ್ಯವನ್ನು ಬಿಜೆಪಿ ಸಂಸದರು ಕಳೆದುಕೊಂಡಿದ್ದಾರೆ. ಇವರು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಇದೇ ಸಂದರ್ಭದಲ್ಲಿ ಆಗ್ರಹಪಡಿಸಲಾಯಿತು.
ಮೇಕೆದಾಟು ವಿಷಯದಲ್ಲಿ ವಾಸ್ತವಾಂಶದ ಮಾಹಿತಿ ಪಡೆಯದೇ ಕೇವಲ ಪ್ರಚಾರಕ್ಕಾಗಿ ಧರಣಿ ನಾಟಕವಾಡುತ್ತಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ನಡೆಯನ್ನು ಖಂಡಿಸಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖಂಡರಾದ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಓದಿ: ತಾಳಿಕೋಟೆ ಗುಂಡಕನಾಳ ಗ್ರಾಮದಲ್ಲಿ ಜಿಲ್ಲಾ ಮಠಾಧೀಶರ ಒಕ್ಕೂಟದ 15 ನೇ ಸಭೆ