ಬೆಂಗಳೂರು : ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ಗೆ ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತರಲು ಉದ್ದೇಶಿಸಿರುವ ವಿವಿಧ ಜನವಿರೋಧಿ ಕಾಯ್ದೆಗಳ ವಿರುದ್ಧ ರೈತ, ದಲಿತ, ಕಾರ್ಮಿಕ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆಕೊಟ್ಟಿರುವ ಬಂದ್ಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನಿರ್ದೇಶನದ ಮೇರೆಗೆ ನಾಳೆ ಬೆಳಗ್ಗೆ 11.30ಕ್ಕೆ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಕೇಂದ್ರ ಬಿಜೆಪಿ ಸರ್ಕಾರವು ಜಾರಿಗೆ ತರುತ್ತಿರುವ ಮಸೂದೆಗಳು ರೈತ ವಿರೋಧಿ, ಕಾರ್ಮಿಕ ವಿರೋಧಿ ತಿದ್ದುಪಡಿ ಮಸೂದೆಗಳಾಗಿವೆ ಹಾಗೂ ಜನ ವಿರೋಧಿ ಮಸೂದೆಗಳು ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಈ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಪಕ್ಷದ ಹಿರಿಯ-ಕಿರಿಯ ನಾಯಕರು ಭಾಗವಹಿಸಲಿದ್ದಾರೆ.