ಬೆಂಗಳೂರು: ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರದ ವಿರುದ್ಧ ಮನವಿ ಸಲ್ಲಿಸಿದ್ದಾರೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ನೆರೆ ಪರಿಹಾರ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ನಗರದಲ್ಲಿ ಇಂದು ರಾಜಭವನ ಮುತ್ತಿಗೆ ಮುಂದಾಗಿ ಬಂಧನಕ್ಕೊಳಗಾಗಿ ಬಿಡುಗಡೆಯಾದ ಬಳಿಕ ಪ್ರತ್ಯೇಕ ನಿಯೋಗ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ರಾಜಭವನದಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲಾ ಅವರನ್ನ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ನೇತೃತ್ವದಲ್ಲಿ ತೆರಳಿದ್ದ ಯುವ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕರ್ನಾಟಕದ ನೆರೆಪೀಡಿತ ಪ್ರದೇಶಗಳ ಬಗ್ಗೆ ಗಮನಹರಿಸುತ್ತಿಲ್ಲ, ನಿರಾಶ್ರಿತರಿಗೆ ಸೂಕ್ತ ಪರಿಹಾರ ಒದಗಿಸುವ ಕಾರ್ಯ ನಿರೀಕ್ಷಿತ ವೇಗದಲ್ಲಿ ಆಗುತ್ತಿಲ್ಲ. ಸಮಸ್ಯೆ ಯಲ್ಲಿರುವ ಜನರಿಗೆ ಸ್ಪಂದಿಸುವ ಬದಲು ಸರ್ಕಾರ ಜನ ವಿರೋಧಿ ನಿಲುವು ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನು ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆಗೆ ಮುಂದಾದ ನಮ್ಮನ್ನ ಬಂಧಿಸಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿಪಕ್ಷಗಳ ಮಾತಿಗೆ ಬೆಲೆ ಕೊಡುತ್ತಿಲ್ಲ. ಇದರಿಂದ ತಾವು ಮಧ್ಯಪ್ರವೇಶ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನೆರೆ ಸಂತ್ರಸ್ತರ ಪರಿಹಾರ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಸೂಚಿಸಬೇಕೆಂದು ಮನವಿ ಮಾಡಿಕೊಂಡರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಸೇರಿದಂತೆ ಮತ್ತಿತರ ನಾಯಕರು ರಾಜ್ಯಪಾಲರಿಗೆ ಮನವಿ ಸಲ್ಲಿಸಿ ವಾಪಾಸಾದರು.