ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ ಪೂರ್ವಭಾವಿ ಸಭೆಯನ್ನು ಮುಂದುವರೆಸಿದ್ದು, ಇಂದು 10 ಇಲಾಖೆಗಳ ಜೊತೆ ಸಭೆ ನಡೆಸಿ ಬೇಡಿಕೆಗಳ ಕುರಿತು ಚರ್ಚಿಸಿದರು.
ಜಲಸಂಪನ್ಮೂಲ, ವೈದ್ಯಕೀಯ ಶಿಕ್ಷಣ, ಆರೋಗ್ಯ, ಗಣಿ ಮತ್ತು ಭೂ ವಿಜ್ಞಾನ, ಕೃಷಿ, ತೋಟಗಾರಿಕೆ, ರೇಷ್ಮೆ, ನಗರಾಭಿವೃದ್ಧಿ, ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳು, ಬೆಂಗಳೂರು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಇಲಾಖೆಯ ಅಧಿಕಾರಿಗಳು ಮತ್ತು ಸಚಿವರ ಜತೆ ಸಮಾಲೋಚನೆ ನಡೆಸಿದರು.
ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ 2021-22ನೇ ಸಾಲಿನ ಬಜೆಟ್‌ನಲ್ಲಿ ನೀಡಬೇಕಾಗಿರುವ ಅನುದಾನ, ನೀರಾವರಿ ಯೋಜನೆಗಳ ಕಾಮಗಾರಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೈಗೊಳ್ಳಬೇಕಾಗಿರುವ ನೀರಾವರಿ ಯೋಜನೆಗಳ ಕುರಿತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚಿಸಿದರು.
ಕೋವಿಡ್ ಹಿನ್ನೆಲೆ ಆರ್ಥಿಕ ಪರಿಸ್ಥಿತಿಗನುಗುಣವಾಗಿ ಇಲಾಖೆಗಳಿಗೆ ಅನುದಾನ ಹಂಚಿಕೆ ಮಾಡಲಾಗುವುದು. ಈಗಾಗಲೇ ಘೋಷಣೆ ಮಾಡಿರುವ ಯೋಜನೆಗಳನ್ನು ಪೂರ್ಣಗೊಳಿಸಬೇಕು. ಇಲಾಖಾವಾರು ಬೇಡಿಕೆಗಳನ್ನು ಗಮನಿಸಿ ಪ್ರಮುಖ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: ಡಿಕೆಶಿ ಭೇಟಿಯಾದ ಮಧು ಬಂಗಾರಪ್ಪ: ತೆನೆ ಇಳಿಸಿ 'ಕೈ' ಹಿಡಿಯಲು ಒಲವು