ಬೆಂಗಳೂರು: ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಪೊಲೀಸರಲ್ಲಿ ಸಹ ಕೋವಿಡ್ 19 ಪತ್ತೆಯಾಗಿದ್ದು, ಇಂದು ಸಿಟಿ ಮಾರ್ಕೆಟ್ ಟ್ರಾಫಿಕ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂವರು ಪೊಲೀಸರಿಗೆ ಕೊರೊನಾ ದೃಢಪಟ್ಟಿದೆ. ಸದ್ಯಕ್ಕೆ ಪೊಲೀಸರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತೀಚೆಗೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಪೊಲೀಸರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಕೊರೊನಾ ದೃಢವಾಗಿದೆ. ಒಂದೆಡೆ ಠಾಣೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಮತ್ತೊಂದು ಕಡೆ ಸೋಂಕಿತರ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಹಾಗೆಯೇ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಆರೋಪಿಗೂ ಕೊರೊನಾ:
ವೈಟ್ಫೀಲ್ಡ್ ವಿಭಾಗದಲ್ಲಿ ಬರುವ ಮಾರತಹಳ್ಳಿ ಪೊಲೀಸರು ತಮಿಳುನಾಡು ಮೂಲದ ವ್ಯಕ್ತಿಯನ್ನು ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಿದ್ದರು. ಬಂಧನದ ಬಳಿಕ ಆರೋಪಿಯಲ್ಲಿ ಕೊರೊನಾ ಇರುವುದು ದೃಢಪಟ್ಟ ಹಿನ್ನೆಲೆ ಸದ್ಯ ಆರೋಪಿ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಪೊಲೀಸರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿದ್ದು, 40 ಮಂದಿ ಪೊಲೀಸ್ ಸಿಬ್ಬಂದಿಗೆ ಆರೋಗ್ಯದ ಕುರಿತು ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ.