ಬೆಂಗಳೂರು: ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕೇರಳದಲ್ಲಿ ಕೊರೊನಾ ಉಲ್ಬಣಿಸುತ್ತಿರುವ ಹಿನ್ನೆಲೆ ರಾಜ್ಯದ ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ ಕಾರ್ಯವನ್ನು ತೀವ್ರಗೊಳಿಸಿ, ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಮುಖ್ಯಕಾರ್ಯದರ್ಶಿಗೆ ಡಿಸಿಎಂ ಗೋವಿಂದ ಕಾರಜೋಳ ಪತ್ರ ಬರೆದಿದ್ದಾರೆ.
ನೆರೆ ರಾಜ್ಯಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗಡಿ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಅನೇಕ ತಾಲೂಕುಗಳು ಈ ರಾಜ್ಯಗಳಿಗೆ ಹೊಂದಿಕೊಂಡಿವೆ. ಸಾರ್ವಜನಿಕರು, ಕೂಲಿ ಮಾಡುವ ಜನರು ನೆರೆಯ ರಾಜ್ಯಗಳಿಗೆ ಪ್ರತಿನಿತ್ಯ ಸಂಚರಿಸುತ್ತಿದ್ದಾರೆ. ಅಲ್ಲದೆ ಜೀವನೋಪಾಯಕ್ಕಾಗಿ ಹೆಚ್ಚು ಜನರು ಗೋವಾಕ್ಕೆ ಹೋಗಿ ಬರುತ್ತಿರುವ ಹಿನ್ನೆಲೆ ಇವರಿಗೆ ಕೊರೊನಾ ಸೋಂಕು ತಗುಲಿ ಗಡಿ ಜಿಲ್ಲೆಗಳಲ್ಲಿ ಕೊರೊನಾ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆ ಚೆಕ್ ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಂಡು, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಆದೇಶಿಸುವಂತೆ ಡಿಸಿಎಂ ಗೋವಿಂದ ಕಾರಜೋಳ ಸೂಚಿಸಿದ್ದಾರೆ.
ಇದನ್ನೂ ಓದಿ: 'ಯಾವುದೇ ಧರ್ಮದ ಪರಿಚಯ ಪಠ್ಯ ಕಡಿತ ಮಾಡಿಲ್ಲ, ಅನಗತ್ಯ ವಿವಾದ ಬೇಡ'