ಬೆಂಗಳೂರು: ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮತ್ತು ಅವರ ಜೊತೆಯಲ್ಲಿ ಇರುವವರಿಗೆ ಕೋವಿಡ್-19 ಪರೀಕ್ಷೆ ಮಾಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳು ಸೇರಿದದಂತೆ ವಿವಿಧ ಖಾಯಿಲೆಗಳಿಗೆ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ವೈದ್ಯರಿಗೆ, ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳು ಮತ್ತವರನ್ನು ನೋಡಿಕೊಳ್ಳುತ್ತಿರುವ ಸಂಬಂಧಿಕರಿಗೆ ಕೋವಿಡ್-19 ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಕಿಮಿಯೋಥೆರಪಿ, ರೇಡಿಯೋಥೆರಪಿ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹೀಗಾಗಿ ಅಂತವರಿಗೆ ಕೊರೊನಾ ಸೋಂಕು ತಗುಲಿದರೆ ಮಾರಕವಾಗಲಿದೆ. ಮುನ್ನೆಚ್ಚರಿಕೆಯಿಂದ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಕೊರೊನಾ ಭೀತಿ ಹೆಚ್ಚಿರುವ ಈ ಸಮಯದಲ್ಲಿ ಕಿದ್ವಾಯಿ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿಲ್ಲ. ದಿನದಿಂದ ದಿನಕ್ಕೆ ಆಸ್ಪತ್ರೆಗೆ ಬರುವವರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಒಂದು ವೇಳೆ ಕ್ಯಾನ್ಸರ್ ರೋಗಿಗಳಿಗೆ ಕೊರೊನಾ ಸೋಂಕು ತಗುಲಿದರೆ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಇದು ಕುಟುಂಬದ ಇತರ ಸದಸ್ಯರಿಗೂ ಸಮಸ್ಯೆ ಉಂಟು ಮಾಡಲಿದೆ. ಹಾಗಾಗಿ ಪರೀಕ್ಷೆಗೆ ಮುಂದಾಗಿದ್ದೇವೆ ಎಂದು ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.