ಬೆಂಗಳೂರು : ಕೆ ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಧರಣಿ ನಡುವೆ ಯಾವುದೇ ಚರ್ಚೆ ಇಲ್ಲದೆ ಎರಡು ವಿಧೇಯಕಗಳಿಗೆ ವಿಧಾನ ಪರಿಷತ್ ಅಂಗೀಕಾರ ನೀಡಿತು.
ಮಧ್ಯಾಹ್ನದ ಕಲಾಪ ಆರಂಭಗೊಳ್ಳುತ್ತಿದ್ದಂತೆ ಶಾಸಕ ರಚನಾ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಕೈಗೆತ್ತಿಕೊಂಡರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ ಮಾಧುಸ್ವಾಮಿ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ವಿಧಾನಮಂಡಲದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ( ತಿದ್ದುಪಡಿ) ವಿಧೇಯಕ-2022 ಮಂಡಿಸಿದರು.
ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರಿಂದ ಧರಣಿ ನಡೆಯುತ್ತಿರುವ ನಡುವೆ ಯಾವುದೇ ಚರ್ಚೆ ನಡೆಯದೇ ಧ್ವನಿಮತದ ಮೂಲಕ ವಿಧೇಯಕವನ್ನು ಪರಿಷತ್ ಅಂಗೀಕರಿಸಿತು.
ವಿಧೇಯಕವನ್ನು ಮತಕ್ಕೆ ಹಾಕಿದಾಗ ಕೆಲವೊಂದು ಸ್ಪಷ್ಟೀಕರಣ ಬೇಕು ಎಂದು ಜೆಡಿಎಸ್ ಸದಸ್ಯರು ಪ್ರಸ್ತಾಪಿಸಿದರು. ಇದಕ್ಕೆ ಸಿಡಿಮಿಡಿಗೊಂಡ ಸಚಿವ ಮಾಧುಸ್ವಾಮಿ, ಈಗೇನು ಸ್ಪಷ್ಟೀಕರಣ? ಸುಮ್ಮನೆ ಇರಿ ಎನ್ನುತ್ತಾ ಬಿಲ್ ಪಾಸ್ ಮಾಡಿಸಿಕೊಂಡರು.
ನಂತರ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕ- 2022 ಮಂಡಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ ಮಾಧುಸ್ವಾಮಿ, ವಿಧೇಯಕಕ್ಕೆ ಅಂಗೀಕಾರ ನೀಡುವಂತೆ ಮನವಿ ಮಾಡಿದರು. ಕಾಂಗ್ರೆಸ್ ಧರಣಿ ನಡುವೆ ಧ್ವನಿಮತದ ಮೂಲಕ ವಿಧೇಯಕಕ್ಕೆ ವಿಧಾನ ಪರಿಷತ್ ಅಂಗೀಕಾರ ನೀಡಿತು.
ವಿಧೇಯಕಗಳ ಅಂಗೀಕಾರದ ನಂತರವೂ ಸದನದಲ್ಲಿ ಕಾಂಗ್ರೆಸ್- ಬಿಜೆಪಿ ಸದಸ್ಯರ ನಡುವೆ ಘೋಷಣೆ ಮೊಳಗಿದವು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಪ್ರಸ್ತಾಪಕ್ಕೆ ಅಂಗೀಕಾರ ಸಿಗುತ್ತಿದ್ದಂತೆ ಕಲಾಪವನ್ನು ಮಾರ್ಚ್ 4ಕ್ಕೆ ಮುಂದೂಡಿಕೆ ಮಾಡಲಾಯಿತು.
ಓದಿ: ಮಾರ್ಚ್ 4ಕ್ಕೆ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಲಿರುವ ಸಿಎಂ ಬೊಮ್ಮಾಯಿ