ಬೆಂಗಳೂರು: ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನು ಗುರಿಯಾಗಿರಿಸಿಕೊಂಡು ಅನಗತ್ಯವಾಗಿ ಪ್ರಕರಣ ದಾಖಲಿಸುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಸಿಎಂ ಗೃಹ ಕಚೇರಿ ಕೃಷ್ಣಗೆ ಮುತ್ತಿಗೆ ಹಾಕಲು ಮುಂದಾಗಿದ್ದು ಅವರನ್ನು ಅರ್ಧದಲ್ಲಿಯೇ ತಡೆಯಲು ಪೊಲೀಸರು ಸಜ್ಜಾಗಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಮೌರ್ಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಳ್ಳುತ್ತಿದ್ದಾರೆ. ನಂತರ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಹಾಗೂ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಇವರನ್ನ ಮಧ್ಯದಲ್ಲೇ ತಡೆಯುವ ಸಿದ್ಧತೆ ಕೈಗೊಳ್ಳಲಾಗಿದೆ. ಮುನ್ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ. ಮಾಜಿ ಸಚಿವರು ಮಾಜಿ ಸಂಸದರು ರಾಜ್ಯಸಭೆ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿ ವೃತ್ತದಲ್ಲಿ ಜಮಾವಣೆಗೊಳ್ಳುತ್ತಿದ್ದಾರೆ.
ಮೌರ್ಯ ವೃತ್ತದಿಂದ ಸರಿ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸಿಎಂ ಗೃಹ ಕಚೇರಿ ಕೃಷ್ಣಗೆ ತೆರಳಿ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ. ಆದರೆ ಅನತಿ ದೂರದಲ್ಲಿರುವ ರೇಸ್ ವ್ಯೂ ಜಂಕ್ಷನ್ ಬಳಿಯೇ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಲಾಗುತ್ತಿದೆ.