ಬೆಂಗಳೂರು: ಕಳೆದು ತಿಂಗಳು ಮಂಗಳೂರಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್‌ಐಟಿ ರಚಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಗೃಹ ಇಲಾಖೆಗೆ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.
ಕಳೆದ ಡಿಸೆಂಬರ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಲ್ಲಿ ಪ್ರತಿಭಟನೆ ನಡೆದ ವೇಳೆ ಪೊಲೀಸರು ಗೋಲಿಬಾರ್ ಮಾಡಿದ್ದರು. ಈ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಸೇರಿದಂತೆ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ಅರ್ಜಿದಾರರ ಪರ ವಕೀಲ ಜಗದೀಶ್ ಅವರ ವಾದ ಆಲಿಸಿದ ಪೀಠ, ಬಳಿಕ ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ, ಫೆ.4ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. ಹಾಗೆಯೇ, ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ ಇಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಅರ್ಜಿಯಲ್ಲಿ ಘಟನೆಯ ತನಿಖೆ ನಡೆಸಲು ಎಡಿಜಿಪಿ ದರ್ಜೆಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಬೇಕು. ಘಟನೆ ನಡೆದ ಡಿ.19ರಂದು ಸ್ಥಳೀಯ ಆಡಳಿತ ಹಾಗೂ ಖಾಸಗಿ ಅಂಗಡಿ ಮಾಲೀಕರು ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳನ್ನು ಸಂರಕ್ಷಿಸಿಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.