ಬೆಂಗಳೂರು : ಕೊರೊನಾ ಎರಡನೇ ಅಲೆ ಹರಡುವಿಕೆಯನ್ನ ತಡೆಗಟ್ಟಲು ಸರ್ಕಾರ ಸಮರೋಪಾದಿ ಕ್ರಮಕೈಗೊಳ್ಳುತ್ತಿದೆ. ಸರ್ಕಾರದ ಜೊತೆ ಸಂಘ-ಸಂಸ್ಥೆಗಳು ಕೈಜೋಡಿಸುತ್ತಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸಿ.ವಿ ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಸಮೀಪ ವೋಲ್ವೋ ಗ್ರೂಪ್ ಇಂಡಿಯಾ ವತಿಯಿಂದ ಎಂಡೋಕ್ರೈನಾಲಜಿ ಸೆಂಟರ್‌ನಲ್ಲಿ ನೂತನವಾಗಿ ನಿರ್ಮಿಸಿರುವ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಉದ್ಘಾಟಿಸಿದರು.
ನಂತರ ಮಾತನಾಡಿದ ಸಿಎಂ, ಬಿಬಿಎಂಪಿ ಸಹಯೋಗದಲ್ಲಿ ವೋಲ್ವೋ ಸಂಸ್ಥೆ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಆರಂಭಿಸಿದೆ. ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ಈಗಾಗಲೇ ಸರ್ಕಾರ ಕೊರೊನಾ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳುತ್ತಿದೆ.
ಕೋವಿಡ್ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವವರಿಗೆ 1550 ಕೋಟಿಗೂ ಹೆಚ್ಚು ಆರ್ಥಿಕ ಪರಿಹಾರ ಘೋಷಿಸಲಾಗಿದೆ. ಬಿಬಿಎಂಪಿಯಿಂದ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲಾಗಿದೆ.
ಸೋಂಕಿತರಿಗೆ ಅಗತ್ಯ ಚಿಕಿತ್ಸೆ ಒದಗಿಸಲಾಗುತ್ತಿದೆ. ಲಸಿಕಾ ಅಭಿಯಾನ ಕೈಗೊಳ್ಳಲಾಗಿದ್ದು, ಲಸಿಕೆ ಪೂರೈಕೆಗೂ ಕ್ರಮ ಕೈಗೊಳ್ಳಲಾಗುತ್ತಿದೆ.
ಟ್ರಯಾಜ್ ಕೇಂದ್ರ ಆರಂಭಿಸಿ ಸೋಂಕಿತರ ಚಿಕಿತ್ಸೆಗೆ ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ. ಜನರು ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಪೂರಕವಾಗಿ ಬೇಕಿರುವ ಆಮ್ಲಜನಕ ಸಾಕಷ್ಟು ಸೌಲಭ್ಯವಿದ್ದು, ಚಿಕಿತ್ಸೆಗೆ ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸಲಾಗಿದೆ.
ಸ್ಥಳದಲ್ಲೇ ವೈದ್ಯರು, ದಾದಿಯರು, ಆ್ಯಂಬುಲೆನ್ಸ್ ವ್ಯವಸ್ಥೆ ಇದೆ. ಸರ್ಕಾರದ ಜೊತೆ ಅನೇಕ ಸಂಸ್ಥೆಗಳು ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸಿರುವುದು ಶ್ಲಾಘನೀಯವಾಗಿದೆ. ಕೋವಿಡ್ ಕೇರ್ ಸೆಂಟರ್ ಆರಂಭಿಸಿದ ವೋಲ್ವೋಗೆ ಅಭಿನಂದನೆ ಸಲ್ಲಿಸುವುದಾಗಿ ಸಿಎಂ ತಿಳಿಸಿದರು.
ಸಮಾರಂಭದಲ್ಲಿ ವಸತಿ ಸಚಿವ ವಿ.ಸೋಮಣ್ಣ, ಸಂಸದ ಪಿ.ಸಿ.ಮೋಹನ್, ಶಾಸಕ ಎಸ್.ರಘು, ವೋಲ್ವೋ ಗ್ರೂಪ್ ಇಂಡಿಯಾ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಉಪಸ್ಥಿತರಿದ್ದರು.