ಬೆಂಗಳೂರು: ಮಾಂಡೌಸ್ ಅಬ್ಬರವು ಕರ್ನಾಟಕದಲ್ಲಿ ತನ್ನ ಪರಿಣಾಮ ಬೀರುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಒಂದೇ ಸಮನೆ ಸುರಿಯುತ್ತಿದೆ. ಉಷ್ಣಾಂಶ ತೀವ್ರವಾಗಿ ಕುಸಿದಿದ್ದು 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ, ಸಿಲಿಕಾನ್ ಸಿಟಿಯ ಭಾಗಗಳಲ್ಲಿ ಮಳೆ ಮುಂದುವರಿಯಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ 24 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಮಾಂಡೌಸ್ ಚಂಡಮಾರುತಕ್ಕೆ 5 ಮಂದಿ ಬಲಿ; 10 ಸಾವಿರಕ್ಕೂ ಹೆಚ್ಚು ಜನ ನಿರಾಶ್ರಿತ
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದೆ.
ಗಂಟೆಗೆ 65 ರಿಂದ 75 ಕಿ.ಮೀ ವೇಗದಲ್ಲಿ ಬೀಸಲಿರುವ ಗಾಳಿ: ರಾಜ್ಯದಲ್ಲಿ ಮೋಡ ಕವಿದ ವಾತಾವರಣವೇ ಇರಲಿದೆ. ಗಂಟೆಗೆ 65ರಿಂದ 75 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಸೋಮವಾರದವರೆಗೆ (ಡಿಸೆಂಬರ್ 12) ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್, ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ.