ಬೆಂಗಳೂರು: ರಾಜ್ಯದ ವಿವಿಧೆಡೆ ಡಿಸೆಂಬರ್ 16ರ ವರೆಗೆ ಮೋಡ ಕವಿದ ವಾತಾವರಣ, ಚಳಿ ಜೊತೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಹಾಗು ಚಳಿಯ ವಾತಾವರಣ ಸೃಷ್ಟಿಯಾಗಿದೆ. ನಾಳೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆ ಸುರಿಯುವ ನಿರೀಕ್ಷೆಯಿದೆ. ಇನ್ನೂ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಜೋರು ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆ: ಮ್ಯಾಂಡಸ್ ಚಂಡಮಾರುತದ ಪರಿಣಾಮದಿಂದ ಸಿಲಿಕಾನ್ ಸಿಟಿಯ ತಾಪಮಾನ ಇಳಿಕೆಯಾಗಿದೆ. ಮೋಡ ಕವಿದ ವಾತಾವರಣ ಮುಂದುವರಿದಿದೆ. ನಗರದ ಕೆಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ.
ಇದನ್ನೂ ಓದಿ: ನಗರದಲ್ಲಿ ಜಿಟಿ ಜಿಟಿ ಮಳೆ, ಶೀತಗಾಳಿ: ಜನರಲ್ಲಿ ಕಾಣಿಸಿಕೊಳ್ಳುತ್ತಿವೆ ಹಲವು ಆರೋಗ್ಯ ಸಮಸ್ಯೆಗಳು