ಸಿಎಂ ಬೊಮ್ಮಾಯಿ ಆಶ್ವಾಸನೆ ಬಳಿಕ ದಲಿತಪರ ಸಂಘಟನೆಗಳ ಪ್ರತಿಭಟನೆ ಅಂತ್ಯ - ಬೆಂಗಳೂರು ದಲಿತರ ಪ್ರತಿಭಟನೆ
ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ದಲಿತಪರ ಸಂಘಟನೆಗಳ ಮತ್ತು ಮುಸ್ಲಿಂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಸಮಾವೇಶಗೊಂಡು ಆನಂದರಾವ್ ವೃತ್ತದ ಮೇಲ್ಸೇತುವೆ ಮೂಲಕ ಬೃಹತ್ ಕಾಲ್ನಡಿಗೆ ಜಾಥಾ ನಡೆಸಿದರು.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆಶ್ವಾಸನೆ ಬಳಿಕ ದಲಿತ ಪರ ಸಂಘಟನೆಗಳ ಬೃಹತ್ ಪ್ರತಿಭಟನಾ ಜಾಥಾ ಅಂತ್ಯ ಕಂಡಿದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ. ಕೆ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆಸಿ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವಮಾನ ಮಾಡಿದ್ದ ಆರೋಪ ಸಂಬಂಧ, ಅವರನ್ನು ವಜಾ ಮಾಡಿ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳು ಮತ್ತು ಎಸ್ಡಿಪಿಐ ಕಾರ್ಯಕರ್ತರು ನಗರದಲ್ಲಿಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ದಲಿತಪರ ಸಂಘಟನೆಗಳ ಮತ್ತು ಎಸ್ಡಿಪಿಐ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಸಮಾವೇಶಗೊಂಡು ಆನಂದರಾವ್ ವೃತ್ತದ ಮೇಲ್ಸೇತುವೆ ಮೂಲಕ ಬೃಹತ್ ಕಾಲ್ನಡಿಗೆ ಜಾಥಾ ನಡೆಸಿದರು. ಮೆರವಣಿಗೆಯಿಂದ ನಗರದಲ್ಲಿ ವಾಹನ ಸಂಚಾರಕ್ಕೆ ಸಾಕಷ್ಟು ಅಡಚಣೆಯಾಯಿತು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್ ಭಾವಚಿತ್ರ ತೆಗೆಯಿಸಿ ಜನತೆಗೆ, ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ಅವರನ್ನು ವಜಾಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: 'ಏಕ್ ಲವ್ ಯಾ' ಪ್ರಿವ್ಯೂಗೆ ಸಿದ್ದರಾಮಯ್ಯ, ಡಿಕೆಶಿಗೆ ಆಹ್ವಾನಿಸಿದ ಪ್ರೇಮ್.. ರಾಜಕೀಯ ಎಂಟ್ರಿ ಬಗ್ಗೆ ಹೇಳಿದ್ದು ಹೀಗೆ..
ನಗರದಲ್ಲಿ ಸೆಕ್ಷನ್ 144 ಇದ್ದ ಕಾರಣ ಪೊಲೀಸರು ಫ್ರೀಡಂಪಾರ್ಕ್ ಬಳಿ ಮೆರವಣಿಗೆ ತಡೆದರು. ನಂತರ ಫ್ರೀಡಂಪಾರ್ಕ್ ಜಂಕ್ಷನ್ನಲ್ಲಿ ಸಮಾವೇಶ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಎಲ್ಲ ಹಂತದ ಕೋರ್ಟ್ ಹಾಲ್‌ಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಬೇಕು. ನ್ಯಾಯಾಲಯಗಳಲ್ಲಿ ಮೀಸಲಾತಿಗೆ ಪ್ರಥಮ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದರು. ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ನಟ ಚೇತನ್ ದಲಿತ ಮುಖಂಡರಾದ ಮಾವಳ್ಳಿ ಶಂಕರ್, ಎಂ.ವೆಂಕಟಸ್ವಾಮಿ, ಹೆಣ್ಣೂರು ಶ್ರೀನಿವಾಸ್, ಜಿಗಣಿ ಶಂಕರ್, ಕೇಶವಮೂರ್ತಿ ಸೇರಿ ಮುಂತಾದ ಮುಖಂಡರು ಪಾಲ್ಗೊಂಡಿದ್ದರು.
ಪ್ರತಿಭಟನಾ ಸ್ಥಳಕ್ಕೆ ಸಿಎಂ ಬೊಮ್ಮಾಯಿ: ಸಂಜೆ ವೇಳೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಮನವಿ ಪತ್ರ ಸ್ವೀಕರಿಸಿದರು. ಈ ವೇಳೆ ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡುವ ಮೂಲಕ ಮನವೊಲಿಸಿದರು.