ಬೆಂಗಳೂರು: "ಜೆಡಿಎಸ್ ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ಡಿ ಕೆ ಶಿವಕುಮಾರ್ ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ನ 19 ಶಾಸಕರು ಬೆಂಬಲ ನೀಡುತ್ತೇವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, "ಕುಮಾರಸ್ವಾಮಿ ಅವರು ಎನ್ಡಿಎ ಮೈತ್ರಿಕೂಟದವರು. ನಮಗೂ ಎನ್ಡಿಎಗೂ ಸಂಬಂಧವಿಲ್ಲ. ಮೊದಲು ಎನ್ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ" ಎಂದು ತಿರುಗೇಟು ನೀಡಿದ್ದಾರೆ.
"ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟುಗಳ ಜೊತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ. ಟೀಕೆ ಮಾಡುವುದನ್ನು ಬಿಟ್ಟು, ಸರ್ಕಾರವನ್ನು ತಿದ್ದಲಿ. ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಈಗ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಮಸ್ಕಾರ" ಎಂದು ತಿಳಿಸಿದರು.
ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಶೀತಲ ಸಮರ.. ಮುಂದೆ ಭೀಕರ ಯುದ್ಧವೂ ನಡೆಯಲಿದೆ: ಬಿ.ವೈ. ವಿಜಯೇಂದ್ರ ವ್ಯಂಗ್ಯ
ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?: ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, "ಡಿಸಿಎಂ ಡಿ.ಕೆ. ಶಿವಕುಮಾರ್ ನಾಳೆಯೇ ಮುಖ್ಯಮಂತ್ರಿಯಾಗುವುದಾದರೆ ಜೆಡಿಎಸ್ನ 19 ಶಾಸಕರೂ ಬೆಂಬಲ ಕೊಡುತ್ತೇವೆ. ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಷ್ಟು ಜನ ಸಿಎಂ ಆಗುತ್ತಾರೆ ಗೊತ್ತಿಲ್ಲ. ಇದನ್ನು ನೋಡಿದರೆ ಈ ಸರ್ಕಾರಕ್ಕೆ ಟಿಸಿಎಂ (ಟೆಂಪರವರಿ ಮುಖ್ಯಮಂತ್ರಿ) ಹಾಗೂ ಡಿಸಿಎಂ (ಡೂಪ್ಲಿಕೇಟ್ ಮುಖ್ಯಮಂತ್ರಿ) ಸರ್ಕಾರವೆಂದು ಕರೆಯಬಹುದು" ಎಂದಿದ್ದರು.
"ಯಾವ ರೀತಿ ರೈತರನ್ನು ಉಳಿಸುತ್ತೀರಾ ಎಂದು ರಾಜ್ಯ ಸರ್ಕಾರವನ್ನು ಕೇಳುತ್ತೇನೆ. ವಿರೋಧ ಪಕ್ಷಗಳ ಬಗ್ಗೆ ಲಘುವಾಗಿ ಮಾತನಾಡಬೇಡಿ. ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಡೈವರ್ಟ್ ಮಾಡಬೇಡಿ. ಬಿಜೆಪಿ ಲೀಡರ್ ಲೇಸ್, ಜೆಡಿಎಸ್ ಪೀಪಲ್ ಲೇಸ್ ಅಂತೀರಾ?. ಕಲಬುರಗಿ ಜನಕ್ಕೆ ನಿಮ್ಮ ಕೊಡುಗೆ ಏನು? ಎಂದು ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನಿಸಿದ ಹೆಚ್ಡಿಕೆ, ಲೋಕಸಭೆ ಚುನಾವಣೆ ಮುಗಿಯಲಿ ತೋರಿಸುತ್ತೇವೆ" ಎಂದು ಸವಾಲು ಹಾಕಿದ್ದರು.
"ಗೃಹಲಕ್ಷ್ಮಿ ಯೋಜನೆಯಲ್ಲಿ ಎಷ್ಟು ಮಹಿಳೆಯರಿಗೆ ಹಣ ಕೊಟ್ಟಿದ್ದೀರಾ?. ಅಕ್ಕಿಯದ್ದು ಬೇರೆ ಕಥೆ, ಮಂತ್ರಿಗಳು ಸಭೆಗೆ ಹೋದರೆ ಜನರು ಹಣ ಬೇಡ, ಅಕ್ಕಿ ಬೇಕು ಎಂದು ಕೇಳುತ್ತಿದ್ದಾರೆ" ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.