ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ರಾಜ್ಯ ರಾಜಧಾನಿ ಅಭಿವೃದ್ಧಿಗೆ ಮುಂದಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರು ಅಭಿವೃದ್ಧಿ ಕುರಿತು ಏನೆಲ್ಲ ಯೋಜನೆ ಜಾರಿಗೆ ತರಬಹುದು ಎನ್ನುವ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಸಮಾಲೋಚನೆ ನಡೆಸಿದರು. ನಗರದ ಅಭಿವೃದ್ಧಿಗೆ ಪೂರಕವಾಗಿ ಅಗತ್ಯ ಸಲಹೆಗಳನ್ನು ಪಡೆದುಕೊಂಡರು.
ಬೊಮ್ಮಾಯಿ ಅವರ ರೇಸ್ ಕೋರ್ಸ್ ರಸ್ತೆಯ ಸರ್ಕಾರಿ ರೇಸ್‌ವ್ಯೂ ಕಾಟೇಜ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ತಮ್ಮ ನಿವಾಸಕ್ಕೆ ಬಂದ ಡಿಕೆಶಿಗೆ ಹೂಗುಚ್ಛ ನೀಡಿ ಬೊಮ್ಮಾಯಿ ಸ್ವಾಗತ ಕೋರಿದರು. ಇದಕ್ಕೆ ಪ್ರತಿಯಾಗಿ ಬೊಮ್ಮಾಯಿ ಅವರಿಗೂ ಶಾಲು ಹೊದಿಸಿ, ಹೂಗುಚ್ಛ ನೀಡಿ ಧನ್ಯವಾದ ತಿಳಿಸಿದ ಡಿಕೆಶಿ, ಕೆಲಕಾಲ ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿದರು. ಬಳಿಕ ಬ್ರ್ಯಾಂಡ್ ಬೆಂಗಳೂರು ಸಂಬಂಧ ಉಭಯ ನಾಯಕರು ಮಾತುಕತೆ ನಡೆಸಿದರು.
ಈ ಹಿಂದೆ ಸಿಎಂ ಆಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಬಸವರಾಜ ಬೊಮ್ಮಾಯಿ ಕೆಲಸ ನಿರ್ವಹಿಸಿದ್ದರು. ಈಗ ತಾವು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಕಾರಣ ಬೊಮ್ಮಾಯಿ ಅವರಿಂದ ಬ್ರ್ಯಾಂಡ್ ಬೆಂಗಳೂರು ಸಂಬಂಧ ಸಮಾಲೋಚನೆ ನಡೆಸಿ ಸಲಹೆಗಳನ್ನು ಪಡೆದುಕೊಂಡಿದ್ದಾರೆ. ಮಾತುಕತೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು 2 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ, ಬೆಂಗಳೂರಿನ ಅಭಿವೃದ್ಧಿಗೆ ಕೆಲವು ಉತ್ತಮ ಯೋಜನೆ ಹಾಕಿಕೊಂಡಿದ್ದರು. ಆ ಯೋಜನೆಗಳು ಇನ್ನೂ ಜಾರಿಯಾಗಿಲ್ಲ. ಹೀಗಾಗಿ ಅವರನ್ನು ಭೇಟಿ ಮಾಡಿ ಅವರ ಸಲಹೆ, ಅಭಿಪ್ರಾಯ ಪಡೆದಿದ್ದೇನೆ ಎಂದರು.
ಉಪ ಮುಖ್ಯಮಂತ್ರಿಯಾದ ಬಳಿಕ ಮಾಜಿ ಮುಖ್ಯಮಂತ್ರಿಗಳಾಗಿ ಬೆಂಗಳೂರು ಅಭಿವೃದ್ಧಿಗೆ ತಮ್ಮದೇ ಆದ ಯೋಜನೆಗಳನ್ನು ಹಾಕಿಕೊಂಡಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಎಸ್.ಎಂ. ಕೃಷ್ಣ, ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿದ್ದೇನೆ. ಬೆಂಗಳೂರು ಅಭಿವೃದ್ಧಿ ಕುರಿತು ಚರ್ಚಿಸಿ ಸಲಹೆ ಪಡೆದುಕೊಂಡಿದ್ದೇನೆ. ಆದರೆ ಕುಮಾರಸ್ವಾಮಿ ಅವರು ಇರಲಿಲ್ಲ. ಸಾಧ್ಯವಾದರೆ ಅವರನ್ನೂ ಭೇಟಿ ಮಾಡುತ್ತೇನೆ. ಎಲ್ಲರ ಅನುಭವ ಅವರ ವಿಚಾರಧಾರೆ ಕೇಳಿ ಪಡೆಯುತ್ತೇನೆ. ಬ್ರ್ಯಾಂಡ್ ಬೆಂಗಳೂರು ಮಾಡುವುದು ನನ್ನ ಗುರಿ. ಹಾಗಾಗಿ ಎಲ್ಲ ಪಕ್ಷಗಳ ನಾಯಕರ ಭೇಟಿ ಮಾಡಿ ಸಲಹೆ ಪಡೆದುಕೊಳ್ಳಲಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ದಿನಾಂಕ ತೀರ್ಮಾನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ- ಡಿಸಿಎಂ: ಮತ್ತೊಂದೆಡೆ, ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ ಎಂದು ತಿಳಿಸಿದರು. ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆ ನೋಡುತ್ತಿದ್ದೀರಿ. ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್ಲೈನ್ ಹಾಗೂ ಆಫ್‌ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.