ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶಾಶ್ವತವಾಗಿ ಆಸ್ತಿಯಾಗಿ ಸೃಜನೆಯಾಗುವ ಭೂ ಒಡೆತನ ಯೋಜನೆಗೆ ಅನುದಾನದ ಕೊರತೆ ಇಲ್ಲ. ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಎಲ್ಲಾ ಪ್ರಸ್ತಾವನೆಗಳನ್ನು ಪಡೆದು ತ್ವರಿತವಾಗಿ ಮಂಜೂರು ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರುಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲಾ ನಿಗಮಗಳು ಕಾರ್ಪೋರೇಟ್ ಸಂಸ್ಥೆಗಳಂತೆ ಕಾರ್ಯ ನಿರ್ವಹಿಸಬೇಕು. ಕಚೇರಿಗಳನ್ನು ಗಣಕೀಕರಣಗೊಳಿಸಬೇಕು. ಪರಿಶಿಷ್ಟರ ಏಳಿಗೆಗೆ ಸಕ್ರಿಯವಾಗಿ ಸ್ಪಂದಿಸಿ, ಅರ್ಹರಿಗೆ ಸೌಲಭ್ಯಗಳು ಒದಗುವಂತೆ ಕಾರ್ಯ ನಿರ್ವಹಿಸಬೇಕು ಎಂದರು.
ಭೂ ಒಡೆತನ ಯೋಜನೆಯಡಿ ಭೂಮಿ ನೀಡಿದರೆ ಬೇರೆಯವರಿಗೆ ಮಾರಾಟ ಮಾಡಲು ಅವಕಾಶ ಇರುವುದಿಲ್ಲ. ಮುಂದಿನ ಪೀಳಿಗೆಗೂ ಆಸ್ತಿಯಾಗಿ ಸೃಜನೆಯಾಗುತ್ತದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೊಳವೆ ಬಾವಿಗಳನ್ನು ಕೊರೆಸಲು ನಿಗಮವಾರು ಗಡುವು ನೀಡಲಾಗಿದ್ದು, ಆ ಅವಧಿಯೊಳಗೆ ತ್ವರಿತವಾಗಿ ಕೊಳವೆ ಬಾವಿಗಳನ್ನು ಕೊರೆಸಲು ಕ್ರಮ ಕೈಗೊಳ್ಳಬೇಕು ಎಂದರು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಪ್ರಸಕ್ತ ಸಾಲಿನಲ್ಲಿ 236 ಕೋಟಿ ರೂ. ಮೀಸಲಿಡಲಾಗಿದ್ದು, ವಿವಿಧ ಯೋಜನೆಗಳಡಿ 26,395 ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ. 60,742 ಅರ್ಜಿಗಳು ಸಲ್ಲಿಕೆಯಾಗಿವೆ. ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ 172 ಕೋಟಿ ರೂ ಅನುದಾನವನ್ನು ಮೀಸಲಿಡಲಾಗಿದ್ದು, 14,381 ಫಲಾನುಭವಿಗಳಿಗೆ ಸೌಲಭ್ಯ ನೀಡುವ ಗುರಿಯನ್ನು ಹೊಂದಲಾಗಿದೆ. 43,390 ಅರ್ಜಿಗಳು ಸಲ್ಲಿಕೆಯಾಗಿವೆ. ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ 108 ಕೋಟಿ ರೂ. ಅನ್ನು ಮೀಸಲಿಡಲಾಗಿದ್ದು, 26,000 ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಕಲ್ಪಿಸುವ ಗುರಿಯನ್ನು ಹೊಂದಲಾಗಿದೆ. 59,645 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಮಾಹಿತಿ ನೀಡಿದರು.
ಕರ್ನಾಟಕ ಭೋವಿ ಅಭಿವೃದ್ಧಿ ಹಾಗೂ ತಾಂಡ ಅಭಿವೃದ್ಧಿ ನಿಗಮಕ್ಕೆ ಅನುದಾನವನ್ನು ನೀಡಿ ಗುರಿಯನ್ನು ನಿಗಧಿಪಡಿಸಲಾಗಿದೆ. ಎಲ್ಲಾ ನಿಗಮಗಳು ಅರ್ಜಿಗಳನ್ನು ಪರಿಶೀಲಿಸಿ,ಅರ್ಹರಿಗೆ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು. ಫಲಾನುಭವಿಗಳ ಆಯ್ಕೆಯನ್ನು ಶೀಘ್ರವಾಗಿ ಕೈಗೊಳ್ಳಲು ಕ್ರಮವಹಿಸಬೇಕು. ಅಲೆಮಾರಿ ಸಮುದಾಯದವರ ಏಳಿಗೆಗೆ ಶ್ರಮಿಸಬೇಕು. ಅವರು ಸ್ವಾವಲಂಭಿಗಳಾಗುವಂತಹ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.