ಬೆಂಗಳೂರು: ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಯಶಸ್ವಿಯಾಗಿ ಮುಗಿದಿದ್ದು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ 20,928 ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.
ಕೊರೊನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಮುಂಜಾಗೃತಾ ಕ್ರಮ ಕೈಗೊಂಡು ಶಿಕ್ಷಕರು, ವಿದ್ಯಾರ್ಥಿಗಳು ಸೂಕ್ತ ನಿರ್ದೇಶನಗಳನ್ನು ಪಾಲಿಸುವ ಮೂಲಕ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಸುರಕ್ಷೆತೆಯ ಬಗ್ಗೆ ಕಾಳಜಿ ವಹಿಸಿದ್ದಾರೆ. ಅವರನ್ನು ಅಭಿನಂದಿಸುವುದಾಗಿ ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಕುಮಾರ ನಾಯಕ್ ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರಾಘವೇಂದ್ರ ಅವರು ವಸತಿ ಶಾಲೆಗಳ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯಲು ಕ್ರಮಕೈಗೊಂಡಿದ್ದಾರೆ. ವಸತಿ ಶಾಲೆಗಳ ಯಾವುದೇ ವಿದ್ಯಾರ್ಥಿಗೂ ನ್ಯೂನತೆಯಾದಂತೆ ಎಲ್ಲಾ ಅಗತ್ಯ ಕ್ರಮಕೈಗೊಂಡು ನಿರಂತರವಾಗಿ ಮೇಲ್ವಿಚಾರಣೆ ನಡೆಸಿದ್ದಾರೆ. ಅವರೆಲ್ಲನ್ನೂ ಅಭಿನಂದಿಸುವುದಾಗಿ ತಿಳಿಸಿದ್ದಾರೆ.