ಬೆಂಗಳೂರು: ರಾಜ್ಯಾದ್ಯಂತ ಇಂದು ಗಣಿತ ವಿಷಯದ ಪರೀಕ್ಷೆ ನಡೆದಿದ್ದು, ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ 6 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಪರೀಕ್ಷೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ಗಣಿತ ವಿಷಯ ಪರೀಕ್ಷೆಗೆ ನೊಂದಾಯಿತ 8,08,650 ವಿದ್ಯಾರ್ಥಿಗಳ ಪೈಕಿ 7,91,987 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ ಶೇ. 97.93ರಷ್ಟು ಇಂದು ಹಾಜರಾತಿ ಇದೆ ಎಂದು ತಿಳಿಸಿದರು.
ಈ ಪರೀಕ್ಷೆಗೆ ಕಳೆದ 2018-19ನೇ ಸಾಲಿಗೆ 8,03,949 ವಿದ್ಯಾರ್ಥಿಗಳ ಪೈಕಿ 7,93,353 ವಿದ್ಯಾರ್ಥಿಗಳು ಹಾಜರಾಗಿದ್ದು, 10,596 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ. 98.68 ಹಾಜರಾತಿ ಇತ್ತು. ಮೊದಲ ಬಾರಿಗೆ 7,44,901 ಶಾಲಾ ವಿದ್ಯಾರ್ಥಿಗಳು ಹಾಗೂ 20,923 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. 'ಕಂಟೈನ್‍ಮೆಂಟ್ ಪ್ರದೇಶಗಳ 2,048' ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 292 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇನ್ನು ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ 6 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.
1,442 ವಿದ್ಯಾರ್ಥಿಗಳು ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿದ್ದು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳಿಂದ 659 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 59 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ -600 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 12,644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, 12,539 ವಿದ್ಯಾರ್ಥಿಗಳು ಹಾಜರಾಗಿದ್ದರೆ, 105 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಹೋಂ ಕ್ವಾರಂಟೈನ್- ಪಾಸಿಟಿವ್ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ
ಹೋಂ ಕ್ವಾರಂಟೈನಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಕೋವಿಡ್ ಪಾಸಿಟಿವ್ ಎಂದು 25 ವಿದ್ಯಾರ್ಥಿಗಳು ಗುರುತಿಸಲ್ಪಟ್ಟಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಕ್ಕೆ 3,212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಬೆಂಗಳೂರಿನ ‘ಕೋತ್ಯಾಲ್ ಶಾಲೆ’ಗೆ ಸೇರಿದ 13 ವಿಶೇಷಚೇತನ ಮಕ್ಕಳನ್ನು ಸುರಕ್ಷಿತವಾಗಿ ಕರೆತಂದು ಯಾವುದೇ ಸಮಸ್ಯೆಯಿಲ್ಲದೇ ಜೀವನಭೀಮಾನಗರ ಭಾಗದ ಕೈರಾಳಿ ನಿಲಯಂ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ವರ್ತೂರಿನ ಪರೀಕ್ಷಾ ಕೇಂದ್ರದಲ್ಲಿ ಅಪಘಾತದಲ್ಲಿ ಕಾಲು ಮುರಿದುಕೊಂಡಿರುವ ಅರ್ಷದ್ ಪಾಷಾ ಎಂಬ ವಿದ್ಯಾರ್ಥಿ ತನ್ಮಯತೆಯಿಂದ ಇಂದು ಪರೀಕ್ಷೆಗೆ ಹಾಜರಾಗಿದ್ದಾನೆ.
ಕೊರೊನಾ ಭೀತಿ ಇಲ್ಲಿ ಇಲ್ಲ!
ಬೆಂಗಳೂರು ದಕ್ಷಿಣ ಜಿಲ್ಲೆಯ ಕಬ್ಬನ್‍ಪೇಟೆಯಲ್ಲಿರುವ LOURDE ಪ್ರೌಢಶಾಲೆ ಹಾಗೂ ಕಿಲಾರಿ ರಸ್ತೆಯಲ್ಲಿರುವ ಭಂಡಾರಿ ಶಾಲೆಗಳು ಪರೀಕ್ಷಾ ಕೇಂದ್ರಗಳಾಗಿದ್ದು, ಬಿಬಿಎಂಪಿ ಈ ಶಾಲೆಗಳಲ್ಲಿ ಪರೀಕ್ಷೆ ನಡೆಸಲು ಯಾವುದೇ ತೊಂದರೆಯಿಲ್ಲವೆಂದು ದೃಢೀಕರಣ ನೀಡಿರುವ ಹಿನ್ನೆಲೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ಯಶಸ್ವಿಯಾಗಿ ನಡೆಸಲಾಗಿದೆ.
ಬೆಂಗಳೂರಿನ ಮೂಡಲಪಾಳ್ಯದಲ್ಲಿ ಸೇಂಟ್ಕ್ಸೇವಿಯರ್ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ 289 ವಿದ್ಯಾರ್ಥಿಗಳು ಇಂದು ಸುರಕ್ಷಿತವಾಗಿ ಪರೀಕ್ಷೆ ಬರೆದು ಹಿಂದಿರುಗಿದ್ದಾರೆ. ಈ ಶಾಲೆಯಿಂದ ಸುಮಾರು 80 ಅಡಿ ದೂರದಲ್ಲಿರುವ ತಿರುವಿನ ರಸ್ತೆಯೊಂದರಲ್ಲಿರುವ ನಿವಾಸಿಯೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆ ಆ ಮನೆಯನ್ನು ಮಧ್ಯರಾತ್ರಿ ಸೀಲ್‍ಡೌನ್ ಮಾಡಲಾಗಿದೆ. ಇಂದು ಎಸ್‍ಒಪಿ ಆಧಾರದಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸಿ ಮಕ್ಕಳನ್ನು ಹಿಂದಿರುಗಿಸಲಾಗಿದೆ. ಮುಂದಿನ ಪರೀಕ್ಷೆಗಳನ್ನು ಪ್ರತ್ಯೇಕ ಕೇಂದ್ರದಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಮಕ್ಕಳಿಗೂ ಆ ಕೇಂದ್ರಕ್ಕೆ ಹೋಗಿ ಬರಲು ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗುವುದು.
ಇನ್ನು ಮುನಿಸಿಪಲ್ ಪ್ರೌಢಶಾಲೆ ಗದಗ ಇಲ್ಲಿ ಪರೀಕ್ಷೆ ಬರೆಯುತ್ತಿದ್ದ 6 ಖಾಸಗಿ (ರಿಪೀಟರ್ಸ್) ವಿದ್ಯಾರ್ಥಿಗಳನ್ನು ಅಹಿತಕರ ಚಟುವಟಿಕೆಗಳ ಹಿನ್ನೆಲೆ ಡಿಬಾರ್ ಮಾಡಲಾಗಿದೆ. ಒಟ್ಟಾರೆಯಾಗಿ ಇಂದು 2,879 ಪರೀಕ್ಷಾ ಕೇಂದ್ರಗಳು ಮತ್ತು 330 ಬ್ಲಾಕ್ ಪರೀಕ್ಷಾ ಕೇಂದ್ರಗಳಲ್ಲಿ ಗಣಿತ ಭಾಷಾ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ.