ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡುವ ಕುರಿತು ಸರ್ಕಾರ ಶೀಘ್ರ ನಿರ್ಧಾರ ತೆಗೆದುಕೊಳ್ಳಲಿದೆ. ದೀಪಾವಳಿಯಲ್ಲಿ ಪಟಾಕಿಯಿಂದ ಬರುವ ಹೊಗೆಯಿಂದ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇರುವ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ವರದಿ ಆಧಾರಿಸಿ ಪಟಾಕಿ ನಿಷೇಧಿಸುವ ಸಂಬಂಧ ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೀಪಾವಳಿಯ ಸರಳ ಆಚರಣೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಪಟಾಕಿ ಹೊಗೆಯಿಂದ ಜನರ ಆರೋಗ್ಯಕ್ಕೆ ತೊಂದರೆಯಾಗುತ್ತದೆ. ಕೊರೊನಾ ಸೋಂಕು ಸಹ ಹೆಚ್ಚಾಗುತ್ತದೆ. ಹಾಗಾಗಿಯೇ ಈ ಬಗ್ಗೆ ವರದಿ ನೀಡಲು ತಜ್ಞರ ಸಮಿತಿ ರಚಿಸಿದ್ದೇವೆ. ಇನ್ನೆರಡು ದಿನಗಳಲ್ಲಿ ಸಮಿತಿ ವರದಿ ನೀಡಲಿದೆ ಎಂದರು.
ಈ ಸಮಿತಿ ವರದಿ ಬಂದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪಟಾಕಿ ನಿಷೇಧಿಸಬೇಕೇ, ಬೇಡವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ರಾಜಸ್ಥಾನ ಸೇರಿದಂತೆ ಕೆಲ ರಾಜ್ಯಗಳಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವುದನ್ನು ನಿಷೇಧಿಸಲು ಕೈಗೊಂಡಿರುವ ತೀರ್ಮಾನವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲೂ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.
ಉಪ ಚುನಾವಣೆ ಸಂದರ್ಭದಲ್ಲೂ ಹೆಚ್ಚು ನಿಗಾ ವಹಿಸಲಾಗಿತ್ತು. ಆರ್.ಆರ್ ನಗರ, ಶಿರಾ ಮೇಲೆ ಸೂಕ್ಷ್ಮ ನಿಗಾ ಇಟ್ಟಿದ್ದೇವೆ. ಅಲ್ಲಿ ರ್ಯಾಂಡಮ್ ಟೆಸ್ಟ್ ಮಾಡೋದಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು.
ಇನ್ನು ಕೋವಿಡ್ ಬಂದು ಹೋದಂತಹ ವ್ಯಕ್ತಿಗಳಿಗಾಗಿ ಪ್ರತಿ ಆಸ್ಪತ್ರೆಯಲ್ಲಿ ಪುನರ್ವಸತಿ ಕೇಂದ್ರ ಆರಂಭಿಸಲು ಚಿಂತನೆ ನಡೆಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲೂ ಪುನರ್ವಸತಿ ಕೇಂದ್ರ ಆರಂಭ ಮಾಡುತ್ತೇವೆ ಎಂದು ತಿಳಿಸಿದರು.