ಬೆಂಗಳೂರು: ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆಯ ಲಾಭವನ್ನು ತಲುಪಿಸಿ ಎಂದು ವಸತಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇಂದು ವಸತಿ ಇಲಾಖೆ ಯೋಜನೆಗಳ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಸಿಎಂ, ಆದಷ್ಟು ಬೇಗ ವಿವಿಧ ವಸತಿ ಯೋಜನೆಗಳಲ್ಲಿನ ಮನೆಗಳ ನಿರ್ಮಾಣ ಕಾರ್ಯವನ್ನು ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಡತನ ರೇಖೆಗಿಂತ ಕೆಳಗಿರುವವರಿಗಾಗಿ ರಾಜ್ಯದಲ್ಲಿ 2001 ರಿಂದ ಈವರೆಗೆ 42.37 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ 7 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ವಸತಿ ಇಲಾಖೆ ಅಧಿಕಾರಿಗಳು ತಿಳಿಸಿದರು.
ವಸತಿ ಸಚಿವ ಎಂ.ಟಿ.ಬಿ. ನಾಗರಾಜ್, ಕರ್ನಾಟಕ ವಸತಿ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ವಸತಿ ಇಲಾಖೆ ಕಾರ್ಯದರ್ಶಿ ಜೆ.ರವಿಶಂಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಉಪಸ್ಥಿತರಿದ್ದರು.