ಬೆಂಗಳೂರು:ಉತ್ತರಕರ್ನಾಟಕ ಭಾಗದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತುರ್ತು ಪರಿಹಾರ ಕಾರ್ಯ ಕೈಗೊಳ್ಳಲು ಅಗತ್ಯ ಇಲಾಖೆಗಳನ್ನು ಬೆಳಗಾವಿ ಸುವರ್ಣ ಸೌಧಕ್ಕೆ ಸ್ಥಳಾಂತರಿಸುವಂತೆ ವಿಧಾನ ಪರಿಷತ್ತಿನ ಮಾಜಿ ಸದಸ್ಯ ವೀರಣ್ಣ ಮತ್ತಿಕಟ್ಟಿ ಆಗ್ರಹಿಸಿದ್ದಾರೆ.
ಉತ್ತರ ಕರ್ನಾಟಕ ಅಭಿವೃದ್ಧಿ ಸಂಘದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಸಿಲುಕಿ ಜನರು ನಲುಗಿ ಹೋಗಿದ್ದಾರೆ. ಅಧಿಕಾರಿಗಳು ಬೆಂಗಳೂರಿನಲ್ಲಿ ಕುಳಿತು ತಕ್ಷಣಕ್ಕೆ ಪರಿಹಾರ ಕ್ರಮ ಕೈಗೊಳ್ಳಲು ಆಗುವುದಿಲ್ಲ. ಆದ್ದರಿಂದ ತಕ್ಷಣವೇ ಅಪರ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಂಬಂಧ ಪಟ್ಟ ಇಲಾಖೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಲು ತಕ್ಷಣವೇ ವೈಮಾನಿಕ ಸಮೀಕ್ಷೆ ನಡೆಸಬೇಕು ಎಂದು ಉತ್ತರ ಕರ್ನಾಟಕ ಅಭಿವೃದ್ಧಿ ಸಂಘದ ಅಧ್ಯಕ್ಷ ಮುರುಗೇಶ್ ಜವಳಿ ಆಗ್ರಹಿಸಿದರು. ಇದೇ ವೇಳೆ ಡಾ. ಸಂಗಮೇಶ್ ಕೊಳ್ಳಿ ಅವರ ನೇತೃತ್ವದಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಜನರ ಆರೋಗ್ಯ ತಪಾಸಣೆಗೆ 25 ಜನ ವೈದ್ಯರ ತಂಡ ಗದಗ ಜಿಲ್ಲೆಗೆ ತೆರಳಿತು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿರುವುದರಿಂದ ಬೆಂಗಳೂರಿನ ಉತ್ತರ ಕರ್ನಾಟಕ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ನಗರದ ಎಲ್ಲ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಗಸ್ಟ್ 14ರಂದು ಪ್ರವಾಹ ಪರಿಹಾರ ಕ್ರಮಕ್ಕೆ ಆಗ್ರಹಿಸಿ ಹಾಗೂ ಅಗತ್ಯ ಪರಿಹಾರ ಸಾಮಾಗ್ರಿಗಳ ಸಂಗ್ರಹಕ್ಕಾಗಿ ಬೆಂಗಳೂರಿನಲ್ಲಿ ಟೌನ್ ಹಾಲ್‌ನಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ ನಡೆಸಲಾಗುವುದು ಎಂದು ಹೇಳಿದರು.