ಬೆಂಗಳೂರು: ಬೆಂಗಳೂರು ಮಹಾನಗರದ ಟ್ರಾಫಿಕ್ ಸಮಸ್ಯೆ ನಿವಾರಣೆ ಕುರಿತು ಮಹತ್ವದ ಸಭೆ ನಡೆಸಿ ಚರ್ಚೆ ಮಾಡಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬಿಎಮ್ಆರ್ಡಿಎ ಅಧಿಕಾರಿಗಳ ಜೊತೆ ಸೋಮವಾರ ಸಂಜೆ ಸಭೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದರು.
ಬೆಂಗಳೂರಲ್ಲಿ ಸುರಂಗ ರಸ್ತೆ ಹಾಗೂ ಫ್ಲೈ ಓವರ್ ನಿರ್ಮಾಣ ವಿಚಾರವಾಗಿ ಅಂತಾರಾಷ್ಟ್ರೀಯ ಸಂಸ್ಥೆಯ ಪ್ರತಿನಿಧಿಗಳು ತಮ್ಮ ವಿಷಯ ಮಂಡಿಸಿದರು. ಇದೇ ವೇಳೆ ಶಾಸಕರು, ಸಚಿವರ ಅಭಿಪ್ರಾಯವನ್ನೂ ಪಡೆಯಲಾಗಿದೆ. ಈ ವಿಚಾರವಾಗಿ ನಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚೆ ಮಾಡುತ್ತೇವೆ ಎಂದರು.
ಬಿಬಿಎಂಪಿ ಚುನಾವಣೆ ವಿಚಾರವಾಗಿ ಚರ್ಚೆ ನಡೆದಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, "ಕಾನೂನು ಪ್ರಕಾರ, ನ್ಯಾಯಾಲಯ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆ ಮಾಡಲಾಗುವುದು" ಎಂದು ತಿಳಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, "ಅವರು ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಅವರು ಪ್ರತಿಭಟನೆ ಹೆಸರಿನಲ್ಲಿ ನಮಗೆ ಪ್ರಚಾರ ನೀಡುತ್ತಿದ್ದಾರೆ. ನಾವು ಹೇಗೆ ಜನಪರ ಯೋಜನೆ ಮಾಡುತ್ತಿದ್ದೇವೆ ಎಂದು ಜನರಿಗೆ ತಿಳಿಸುತ್ತಿದ್ದಾರೆ" ಎಂದು ತಿಳಿಸಿದರು.
ಇದನ್ನೂ ಓದಿ: ಕಾಂಗ್ರೆಸ್ನ ಘೋಷಿತ ಎಲ್ಲಾ ಯೋಜನೆಗಳು ಜಾರಿಗೆ ಬರಲಿದೆ: ಡಿಸಿಎಂ ಡಿಕೆಶಿ
ಈಗಾಗಲೇ ಬೆಂಗಳೂರಿನ ಹೆಬ್ಬಾಳ ಹಾಗೂ ಕೆ.ಆರ್. ಪುರದ ಟಿನ್ ಫ್ಯಾಕ್ಟ್ರಿ ಜಂಕ್ಷನ್ನಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ಖುದ್ದು ವೀಕ್ಷಣೆ ಮಾಡಿರುವ ಡಿಕೆಶಿ, ಮಹಾನಗರದಲ್ಲಿ ಸಂಚಾರದಟ್ಟಣೆ ಸಮಸ್ಯೆ ಹೆಚ್ಚಾಗುತ್ತಿದ್ದು, ಇದಕ್ಕೆ ಪರಿಹಾರ ಹುಡುಕಲು ಸರಣಿ ಸಭೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ ಅಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿಕೆಶಿ ಬಿಬಿಎಂಪಿ ಚುನಾವಣೆಯನ್ನು ಅತ್ಯಂತ ಪ್ರಮುಖವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ಜಾಣ ನಡೆಗಳನ್ನು ಇಡುತ್ತಿದ್ದಾರೆ. ವಿಧಾನಮಂಡಲ ಉಭಯ ಸದನಗಳ ಅಧಿವೇಶನ ನಡೆಯುತ್ತಿರುವ ಮಧ್ಯೆಯೂ ವಿಶೇಷ ಸಭೆಗಳನ್ನು ಕರೆದು ಸಿದ್ಧತೆ ಕೈಗೊಳ್ಳುತ್ತಿದ್ದಾರೆ.
ಯಾವುದೇ ಸಂದರ್ಭದಲ್ಲಿಯೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಈಗಾಗಲೇ ವಿಧಾನಸಭೆ ಚುನಾವಣೆಯನ್ನು ಗೆದ್ದಿರುವ ಅಲೆಯಲ್ಲೇ ಬಿಬಿಎಂಪಿಯನ್ನು ಸಹ ಕೈವಶ ಮಾಡಿಕೊಳ್ಳುವ ಪ್ರಯತ್ನದಲ್ಲಿ ಉಪಮುಖ್ಯಮಂತ್ರಿ ಇದ್ದಾರೆ. ಈ ಮೂಲಕ ತಮ್ಮ ರಾಜಕೀಯ ತಂತ್ರಗಾರಿಕೆಯ ಪ್ರದರ್ಶನವನ್ನು ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಪ್ರಯತ್ನಶೀಲರಾಗಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಒಬ್ಬ ಅಜಿತ್ ಪವಾರ್ ಹುಟ್ಟಿಕೊಳ್ಳಬಹುದು : ಕುಮಾರಸ್ವಾಮಿ ಭವಿಷ್ಯ