ಬೆಂಗಳೂರು: ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಮಹಾಲಕ್ಷ್ಮಿ ಲೇಔಟ್ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಮುಖಂಡರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.
ಅತೃಪ್ತರ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸುತ್ತಿದ್ದು, ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಯಶವಂತಪುರ ಹಾಗೂ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಗಳಲ್ಲಿ ಉಪಚುನಾವಣೆ ಎದುರಾದರೆ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಯಶವಂತಪುರ ವಿಧಾನ ಸಭಾ ಕ್ಷೇತ್ರಕ್ಕೆ ಜವರೇಗೌಡರನ್ನ ಅಭ್ಯರ್ಥಿಯನ್ನಾಗಿ ಮಾಡಿ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರ ಸಭೆಯಲ್ಲಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಅಂದರೆ ನಾವು ಪ್ರಬಲವಾಗಬೇಕು. ಇಲ್ಲಿಯವರೆಗೂ ಏಳು ಬಾರಿ ಆಪರೇಷನ್ ಕಮಲ ಆಗಿದೆ. ಬಿಜೆಪಿಯನ್ನ ಸದೆಬಡಿಯಲೇ ಬೇಕು. ಹಾಗಾಗಿ ಜವರೇಗೌಡರನ್ನು ಅಭ್ಯರ್ಥಿಯನ್ನಾಗಿ ಮಾಡಿ ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.