ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಇಂದು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾದರು. ಇಲ್ಲಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಆಸ್ಪತ್ರೆಗೆ ಜನರಲ್ ಚೆಕಪ್‌ಗೆ ಆಗಮಿಸಿದ ಗೌಡರನ್ನು ವೈದ್ಯರು ತಪಾಸಣೆ ನಡೆಸಿದ್ದಾರೆ. ಸ್ವಲ್ಪ ಕಾಲು ಊತ ಹೆಚ್ಚಿದ್ದರಿಂದ ತಪಾಸಣೆ ಮಾಡಿಸಿಕೊಂಡು ಮನೆಗೆ ತೆರಳಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಒಂದು ವಾರಗಳ ಕಾಲ ವಿಶ್ರಾಂತಿ ಪಡೆದುಕೊಳ್ಳುವಂತೆಯೂ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಸದ್ಯ ಗೌಡರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಈ ನಡುವೆ ಚಿಕ್ಕಮಗಳೂರಿನಲ್ಲಿ ಇಂದು ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ದೇವೇಗೌಡರು ಆರೋಗ್ಯ ತಪಾಸಣೆಗೆ ಹೋಗಿದ್ದು, ಅವರು ಬಂದ ನಂತರ ಹಾಸನ ಟಿಕೆಟ್ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಈ ಬಗ್ಗೆ ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲ. ದೇವೇಗೌಡರ ಸಲಹೆ ಪಡೆದು ಆ ಬಳಿಕ ಕಾರ್ಯಕರ್ತರ ಭಾವನೆಗಳಿಗೆ ತಕ್ಕಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಹಾಸನ ಟಿಕೆಟ್: ದೇವೇಗೌಡರಿಂದ ತೀರ್ಮಾನ- ಹೆಚ್.ಡಿ.ಕುಮಾರಸ್ವಾಮಿ