ಬೆಂಗಳೂರು: ಕಾಂಗ್ರೆಸ್ ಪಕ್ಷದ 'ಭಾರತ್ ಜೋಡೋ' ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ದಿಗ್ವಿಜಯ್ ಸಿಂಗ್ ಆಗಮಿಸಿದ್ದು, ಅವರನ್ನ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡಿದ್ದಾರೆ.
ಎಐಸಿಸಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಲ್ಲಿ ಸೆಪ್ಟೆಂಬರ್ 7ರಂದು ಆರಂಭವಾಗುವ ಭಾರತ್ ಜೋಡೋ ಪಾದಯಾತ್ರೆ ತಿಂಗಳ ಕೊನೆಯಲ್ಲಿ ಕರ್ನಾಟಕವನ್ನು ಚಾಮರಾಜನಗರದ ಮೂಲಕ ಪ್ರವೇಶಿಸಲಿದೆ. 21 ದಿನಗಳ ಕಾಲ ಮಧ್ಯ ಕರ್ನಾಟಕದಲ್ಲಿ ಸಂಚರಿಸುವ ಪಾದಯಾತ್ರೆ ರಾಯಚೂರು ಮೂಲಕ ಮುಕ್ತಾಯವಾಗಲಿದೆ. ಈ ಪಾದಯಾತ್ರೆ ಒಟ್ಟಾರೆ ಯಶಸ್ಸಿಗೆ ಶ್ರಮಿಸುತ್ತಿರುವ ರಾಷ್ಟ್ರೀಯ ನಾಯಕರಿಗೆ ಬೆಂಬಲವಾಗಿ ನಿಂತಿರುವ ರಾಜ್ಯ ಕಾಂಗ್ರೆಸ್ ನಾಯಕರು ಕರ್ನಾಟಕದಲ್ಲಿ ಈ ಯಾತ್ರೆಯನ್ನು ಯಶಸ್ವಿಗೊಳಿಸಿಕೊಡುವ ಭರವಸೆ ನೀಡಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಭಾರತ್ ಜೋಡೋ ಯಾತ್ರೆಯ ಬಗ್ಗೆ ಚರ್ಚಿಸಲು ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಎಐಸಿಸಿ ವತಿಯಿಂದ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಿಡಬ್ಲ್ಯುಸಿ ಸದಸ್ಯ ದಿಗ್ವಿಜಯ್ ಸಿಂಗ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಎಐಸಿಸಿ ಪಧಾದಿಕಾರಿಗಳು ಹಾಗೂ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.
ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಉಸ್ತುವಾರಿ ವಹಿಸಿರುವ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಸಂಸದ ಡಿಕೆ ಸುರೇಶ್, ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಯಶಸ್ವಿಗೆ ಅಗತ್ಯ ಸಿದ್ಧತೆ ಪೂರ್ಣ: ಡಿಕೆಶಿ