ಬೆಂಗಳೂರು: ಉಕ್ರೇನ್ನಲ್ಲಿ ಸಿಲುಕಿರುವ ಮಂಡ್ಯ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರುವ ಬಗ್ಗೆ ಕೇಂದ್ರ ಸಚಿವರಿಗೆ ಹಾಗೂ ಮುಖ್ಯಮಂತ್ರಿಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.
ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ದಿನೇಶ್ ಗೂಳಿಗೌಡ, ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಇಂದು ಅನೇಕ ರಾಷ್ಟ್ರಗಳಿಗೆ ತೊಂದರೆಯಾಗುತ್ತಿರುವುದು ತಮಗೆ ಗೊತ್ತಿರುವ ವಿಚಾರವಾಗಿದೆ. ಇದೀಗ ಉಕ್ರೇನ್ನಲ್ಲಿ ನಮ್ಮ ಭಾರತೀಯ ವಿದ್ಯಾರ್ಥಿಗಳು ಬಹಳಷ್ಟು ಮಂದಿ ಇದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದಿದ್ದಾರೆ.
ಈ ನಡುವೆ ಮಂಡ್ಯ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳಾದ ಮನೋಜ್, ಗಾಯತ್ರಿ ಆರ್. ಕೃಷ್ಣ, ಅಶ್ವಿನ್ ಮತ್ತು ಓಂ ಪ್ರಕಾಶ್ ಮನು ಉಕ್ರೇನ್ನಲ್ಲಿ ಎಂಬಿಬಿಎಸ್ ಉನ್ನತ ವ್ಯಾಸಂಗಕ್ಕೆ ತೆರಳಿದ್ದು, ಅಲ್ಲೇ ಅಭ್ಯಾಸ ಮಾಡುತ್ತಿದ್ದಾರೆ.
ಇದೀಗ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆಸಿಕೊಳ್ಳಬೇಕಿದೆ. ಅವರ ಬಗ್ಗೆ ಪೋಷಕರಲ್ಲಿ ಆತಂಕ ಮನೆಮಾಡಿದ್ದು, ತಾವುಗಳು ಕೂಡಲೇ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಆ ನಾಲ್ವರು ವಿದ್ಯಾರ್ಥಿಗಳನ್ನು ದೇಶಕ್ಕೆ ವಾಪಸ್ ಕರೆಸಿಕೊಳ್ಳಲು ಹೈ ಕಮಿಷನ್ ಜೊತೆ ಮಾತನಾಡಿ ವ್ಯವಸ್ಥೆ ಮಾಡಬೇಕಿದೆ. ಈ ಮೂಲಕ ಪೋಷಕರ ಆತಂಕವನ್ನು ದೂರ ಮಾಡಬೇಕಾಗಿ ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಓದಿ: ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳ ಕರೆತರಲು ಅಗತ್ಯ ಕ್ರಮ: ಸಚಿವ ಎಸ್.ಟಿ.ಸೋಮಶೇಖರ್