ಬೆಂಗಳೂರು: ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಮಾಜಿ ಸಚಿವ ಜಿ.ಟಿ.ದೇವೇಗೌಡರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆ ಜೆಡಿಎಸ್ ಪಕ್ಷದಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎನ್ನಲಾಗಿದೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾದ ನಂತರ ಪಕ್ಷದ ಕಾರ್ಯಕ್ರಮಗಳಿಂದ ದೂರ ಸರಿದಿರುವ ಜಿ.ಟಿ.ದೇವೇಗೌಡರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿದೆ. ಆದರೆ, ವರಿಷ್ಠರು ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಮೈತ್ರಿ ಸರ್ಕಾರ ಪತನವಾದಾಗಿನಿಂದ ಪಕ್ಷದ ಕಚೇರಿಗಾಗಲಿ, ಕಾರ್ಯಕ್ರಮಗಳಲ್ಲಾಗಲಿ ಜಿ.ಟಿ.ದೇವೇಗೌಡ ಭಾಗವಹಿಸಿಲ್ಲ. ವಿಧಾನಮಂಡಲ ಅಧಿವೇಶನ ಆರಂಭವಾದ ಸಂದರ್ಭದಲ್ಲಿ ಕರೆದಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗಳಿಗೂ ಅವರು ಹಾಜರಾಗಲಿಲ್ಲ. ಇದರ ಜೊತೆಗೆ ಇತ್ತೀಚೆಗೆ ನಡೆದ ವಿಧಾನ ಪರಿಷತ್ ಉಪ ಚುನಾವಣೆಯಲ್ಲೂ ಪಕ್ಷದ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಹಾಗಾಗಿ, ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕೆಂದು ಕೆಲವು ನಾಯಕರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚೆಯಾಗಿದೆ. ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ಜಿ.ಟಿ.ದೇವೇಗೌಡರು ಭಾಗವಹಿಸುತ್ತಿದ್ದು, ಅಧಿವೇಶನ ಮುಗಿಯುವ ವೇಳೆಗೆ ಪಕ್ಷದ ವರಿಷ್ಠರು ಈ ಬಗ್ಗೆ ಸಮಾಲೋಚನೆ ನಡೆಸಿ ಒಂದು ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.