ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಧವಳಗಿರಿ ನಿವಾಸಕ್ಕೆ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಬಳಿಕ ಮಾತನಾಡಿದ ಬಿ.ಸಿ.ಪಾಟೀಲ್, ನನ್ನ ಹಿರೇಕೆರೂರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಸೌಜನ್ಯದ ಭೇಟಿ ಮಾಡಿ ಅವರಿಗೆ ಶುಭಾಶಯ ಕೋರಿದ್ದೇನೆ. ಅವರು ನಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಶಾಸಕ ಸ್ಥಾನದ ಅನರ್ಹತೆ ವಿಚಾರವಾಗಿ ನಮ್ಮ ವಕೀಲರಾದ ರೋಹ್ಟಗಿ ಅವರೊಂದಿಗೆ ಚರ್ಚಿಸಿದ್ದೇನೆ. ನನಗೆ ಕಾನೂನಿನ ಮೇಲೆ ನಂಬಿಕೆ ಇದೆ. ಶಾಸಕ ಸ್ಥಾನದ ಅನರ್ಹತೆ ವಿಚಾರದಲ್ಲಿ ಸ್ಪೀಕರ್ ತೆಗೆದುಕೊಂಡ ನಿರ್ಧಾರ ಸರಿಯಿಲ್ಲ. ಅವರು ಕಾನೂನನ್ನು ಗಾಳಿಗೆ ತೂರಿ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ರು.
ನಮ್ಮ ಜನರ ಆಶೋತ್ತರಗಳಿಗೆ ಸ್ಪಂದಿಸಬೇಕೆಂಬ ನಿಟ್ಟಿನಲ್ಲಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದೇವೆ. ಕಳೆದ 40 ವರ್ಷದಿಂದ ಕಾಂಗ್ರೆಸ್ ಬಾರದಿದ್ದ ಕ್ಷೇತ್ರದಲ್ಲಿ ನಾನು ಗೆದ್ದು ಬಂದಿದ್ದೆ. ನಾಳೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಜನರ ಅಭಿಪ್ರಾಯದಂತೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ನಾವೇನು ಎಂಬುವುದನ್ನು ಜನತೆ ತೀರ್ಮಾನ ಮಾಡುತ್ತಾರೆ. ಮತ್ತೆ ವಿಧಾನಸಭೆಗೆ ಆರಿಸಿ ಕಳುಹಿಸುತ್ತಾರೆ. ಕಾಂಗ್ರೆಸ್ಗೆ ಹೋಗುವ ಮಾತಿರಲಿ. ಆ ಕಡೆ ತಿರುಗಿಯೂ ನೋಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.