ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪು ಹೊರ ಬೀಳುತ್ತಿದ್ದಂತೆ ಅನರ್ಹ ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ಸದ್ದಿಲ್ಲದೇ ಸಿದ್ಧತೆ ನಡೆಯುತ್ತಿದೆ. ಬಿಜೆಪಿ ಹೈಕಮಾಂಡ್ ಸಮ್ಮತಿ ನೀಡಿದರೆ ನಾಳೆ ಬೆಳಗ್ಗೆಯೇ ಪಕ್ಷ ಸೇರ್ಪಡೆ ಸಮಾರಂಭ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರೋಷನ್ ಬೇಗ್, ಆರ್.ಶಂಕರ್ ಹೊರತುಪಡಿಸಿ ಇತರೆ 15 ಅನರ್ಹ ಶಾಸಕರನ್ನು ನಾಳೆಯೇ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಲವು ತೋರಿದ್ದಾರೆ. ರಾಷ್ಟ್ರಿಯ ನಾಯಕರ ಜೊತೆ ಮಾತುಕತೆ ನಡೆಸಲು ನಿರ್ಧರಿಸಿದ್ದು, ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡಿದರೆ ನಾಳೆ ಬೆಳಗ್ಗೆ 10.30ಕ್ಕೆ ಪಕ್ಷದ ಕಚೇರಿಯಲ್ಲಿ ಸರಳವಾಗಿ ಅನರ್ಹರನ್ನು ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ.
ಈಗಾಗಲೇ ಅನರ್ಹರ ಪಕ್ಷ ಸೇರ್ಪಡೆ ಸಂಬಂಧ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಿಎಂ ಬಿಎಸ್ವೈ ಜೊತೆ ಮಾತುಕತೆ ಮುಗಿದಿದ್ದು, ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದೆ. ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಅನರ್ಹರಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬರಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ.
ಸದ್ಯದ ಮಟ್ಟಿಗೆ ನಾಳೆ ಬೆಳಗ್ಗೆ 10.30 ಕ್ಕೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಹೈಕಮಾಂಡ್ ನಿರ್ಧಾರದ ನಂತರ ಅಧಿಕೃತವಾಗಿ ಪ್ರಕಟಣೆ ಹೊರಡಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ರಾಣೆಬೆನ್ನೂರು ಟಿಕೆಟ್ಗೆ ಈಶ್ವರಪ್ಪ ಫೈಟ್:
ರಾಣೆಬೆನ್ನೂರು ಕ್ಷೇತ್ರದಿಂದ ಪುತ್ರ ಕಾಂತೇಶ್ಗೆ ಟಿಕೆಟ್ ನೀಡುವಂತೆ ಸಚಿವ ಈಶ್ವರಪ್ಪ ಪಟ್ಟು ಹಿಡಿದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಶಂಕರ್ ಬದಲು ಪುತ್ರನಿಗೆ ಟಿಕೆಟ್ ನೀಡುವಂತೆ ರಾಜ್ಯ ಘಟಕದ ಮೇಲೆ ಒತ್ತಡ ಹೇರುತ್ತಿದ್ದು, ಇದಕ್ಕೆ ಸಿಎಂ ಬಿಎಸ್ವೈ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನುವುದು ಕುತೂಹಲ ಕೆರಳಿಸಿದೆ.